ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಬದ್ಧ
ಗೌರಿಬಿದನೂರು.ಜು೬:ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಹಾಗೂ ಅಹವಾಲುಗಳಿಗೆ ಅಧಿಕಾರಿಗಳಿಂದ ಸೂಕ್ತ ಸ್ಪಂಧನೆ ಮಾಡುವ ನಿಟ್ಟಿನಲ್ಲಿ ಜನತಾ ದರ್ಶನವು ನಾಗರೀಕರಿಗೆ ಸೂಕ್ತ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ನಗರದ ಹೊರವಲಯದಲ್ಲಿರುವ ಮಿನಿವಿಧಾನಸೌಧದ ಸಭಾಂಗಣದಲ್ಲಿ ಜಿ.ಪಂ, ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯತಿ ಸಹಯೋಗದೊಂದಿಗೆ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ’ ಜನತಾ ದರ್ಶನ’ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ನಿರ್ದೇಶನದಂತೆ ಪ್ರತೀ ತಾಲ್ಲೂಕು ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಬಾರಿಯ ಮುಂಗಾರಿನ ಆರಂಭದಲ್ಲಿ ಜಿಲ್ಲೆಯ ಬಹುತೇಕ ಭಾಗದಲ್ಲಿ ವಾಡಿಕೆ ಗಿಂತ ಹೆಚ್ಚು ಮಳೆಯಾಗಿದೆ. ಬಿತ್ತನೆ ಕಾರ್ಯವು ಚುರುಕುಗೊಂಡಿದೆ. ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ, ಔಷಧಗಳ ಸಮರ್ಪಕ ಪೂರೈಕೆಗೆ ಈಗಾಗಲೇ ಸಂಬಂಧಪಟ್ಟ ಇಲಾಖೆ ಮತ್ತು ಮಳಿಗೆಗಳಿಗೆ ನಿರ್ದೇಶನ ನೀಡಲಾಗಿದೆ. ಕುಡಿಯುವ ನೀರಿನ ಸಮಸ್ಯೆಯಾಗದಂತೆ ತಾ.ಪಂ ಮತ್ತು ಸ್ಥಳೀಯ ಗ್ರಾ.ಪಂ ತೀವ್ರ ನಿಗಾ ವಹಿಸಿದೆ. ಮುಂಗಾರು ಆರಂಭದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಡೆಂಗಿ ಜ್ವರದ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ. ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಈಡೀಸ್ ಸೊಳ್ಳೆಯ ಲಾರ್ವವನ್ನು ನಾಶ ಮಾಡುವ ಕೆಲಸ ಚುರುಕುಗೊಂಡಿದೆ. ಉಳಿದಂತೆ ಕಂದಾಯ ಮತ್ತು ಇತರ ಸಮಸ್ಯೆಗಳನ್ನು ಪರಿಹಾರ ಕಲ್ಪಿಸಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಜನತಾ ದರ್ಶನ ಕಾರ್ಯಕ್ರಮದಲ್ಲಿ ನಾಗರೀಕರಿಂದ ೩೦ ಕ್ಕೂ ಹೆಚ್ಚು ಅಹವಾಲಯಗಳು ಬಂದಿದ್ದು, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ರವರು ಸಂಬಂಧಪಟ್ಟ ಅಧಿಕಾರಿಗಳ ಸಮ್ಮುಖದಲ್ಲಿ ಸಮಸ್ಯೆಗಳ ಪರಿಹಾರಕ್ಕೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿ.ಪಂ ಸಿಇಒ ಪ್ರಕಾಶ್ ಜಿ.ನಿಟ್ಟಾಲಿ, ಉಪವಿಭಾಗಾಧಿಕಾರಿ ಅಶ್ವಿನ್, ತಹಶೀಲ್ದಾರ್ ಮಹೇಶ್ ಎಸ್.ಪತ್ರಿ, ತಾ.ಪಂ ಇಒ ಜಿ.ಕೆ.ಹೊನ್ನಯ್ಯ, ನಗರಸಭೆ ಆಯುಕ್ತೆ ಡಿ.ಎಂ.ಗೀತಾ, ಬಿಇಒ ಕೆ.ವಿ.ಶ್ರೀನಿವಾಸಮೂರ್ತಿ, ಸಹಾಯಕ ಕೃಷಿ ನಿರ್ದೇಶಕರಾದ ಎಸ್.ಎಂ.ಮೋಹನ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರಾದ ನಾರಾಯಣಪ್ಪ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಚಂದ್ರಮೋಹನ್ ರೆಡ್ಡಿ, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರಾದ ಕಾಂತರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.