ಮೈಸೂರಿನ ನೂತನ ಜಿಲ್ಲಾಧಿಕಾರಿಗಳಿಗೆ ಮೊದಲ ಜನಸ್ಪಂದನ ಸಭೆಯಲ್ಲೇ ಸಮಸ್ಯೆಗಳ ಸರಮಾಲೆ
ಸಂಜೆವಾಣಿ ವಾರ್ತೆ
ನಂಜನಗೂಡು: ಜು.06:- ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿಕಾಂತ ರೆಡ್ಡಿ ಅಧಿಕಾರ ಸ್ವೀಕರಿಸಿದ ಮೊಸಲ ದಿನವೇ ದಕ್ಷಿಣ ಕಾಶಿ ನಂಜನಗೂಡು ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಜನಸ್ಪಂದನ ಕಾರ್ಯಕ್ರಮ ಪ್ರಾರಂಭವಾಗುತ್ತಿದ್ದಂತೆ ಸಾಕಷ್ಟು ವರ್ಷಗಳಿಂದ ಬಗೆಹರಿಸಲಾಗದ ಕಂದಾಯ, ಅಬಕಾರಿ, ನಗರಸಭೆ, ಪೆÇಲೀಸ್, ಲೋಕೋಪಯೋಗಿ, ಪಂಚಾಯತ್ ರಾಜ್, ಶಿಕ್ಷಣ ಇಲಾಖೆಯಲ್ಲಿನ ಸಮಸ್ಯೆಗಳ ಮಹಾಪೂರವೇ ಸಭೆಯಲ್ಲಿ ಪ್ರಸ್ತಾಪವಾಯಿತು. ನಂಜನಗೂಡು ಪಟ್ಟಣವೂ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕಳ್ಳತನ, ಸುಲಿಗೆ, ಕ್ರಿಮಿನಲ್ ಪ್ರಕರಣಗಳಿಗೆ ಕಡಿವಾಣವಿಲ್ಲದಂತಾಗಿದೆ. ನಂಜನಗೂಡು ಮತ್ತು ವರುಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಗ್ರಾಮೀಣ ಭಾಗದ ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದೆ.
ಸರ್ಕಾರ ಜಾರಿ ಮಾಡಿರುವ ಐದು ಭಾಗ್ಯಗಳ ಪೈಕಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿಗಳನ್ನು ಕೂಡ ಪತ್ನಿಯಿಂದ ಪಡೆದುಕೊಳ್ಳುವ ಪತಿ ಮಹಾಶಯರು ಅಕ್ರಮ ಮದ್ಯಕ್ಕೆ ವ್ಯಯ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರ ತವರು ಕ್ಷೇತ್ರದಲ್ಲೇ ಸಂಪೂರ್ಣವಾಗಿ ಅಕ್ರಮ ಮದ್ಯ ಮಾರಾಟವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ತಡೆಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ಮತ್ತು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮಧ್ಯವರ್ತಿ ದಲ್ಲಾಳಿಗಳ ಹಾವಳಿ ಎಲ್ಲೆ ಮೀರಿದೆ. ಗ್ರಾಮ ಪಂಚಾಯಿತಿ ಕಾರ್ಯಾಲಯಗಳಲ್ಲಿ ರೈತರ, ಬಡವರ ಕೆಲಸ ಕಾರ್ಯಗಳು ನಡೆಯುತ್ತಿಲ್ಲ.
ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ನಂಜನಗೂಡು ತಾಲ್ಲೂಕಿನ ಸಾಕಷ್ಟು ಗ್ರಾಮಗಳಲ್ಲಿ ಶಾಲಾ ಕೊಠಡಿಗಳು ಶಿಥಿಲಾವಸ್ಥೆಯಿಂದ ಕೂಡಿವೆ. ಕೆಲವು ಶಾಲೆಗಳಿಗೆ ರಸ್ತೆಗಳ ಸಂಪರ್ಕವನ್ನೇ ಕಲ್ಪಿಸಿಲ್ಲ. ಬದುಕಿರುವವರಿಗೆ ಮರಣ ಪತ್ರ ನೀಡಿದ ಪ್ರಕರಣದಲ್ಲಿ ಕಂದಾಯ ಇಲಾಖೆಯ ಆರ್ ಐ ಪ್ರಕಾಶ್ ಎಂಬುವರನ್ನು ಅಮಾನತುಪಡಿಸದೇ ಇರುವುದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಕೂಡಲೇ ಅವರನ್ನು ಕೆಲಸದಿಂದ ವಜಾ ಮಾಡಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಗರ್ಲೆ ಎಂ ವಿಜಯಕುಮಾರ್ ದೂರು ನೀಡಿದರು.
ಕೆಲ ಸಮಸ್ಯೆಗಳನ್ನು ಆಲಿಸಿದ ನೂತನ ಜಿಲ್ಲಾಧಿಕಾರಿಗಳು ಶಾಕ್ ಆಗಿ ಮೌನವಹಿಸಿದರು. ಮುಖ್ಯಮಂತ್ರಿಗಳ ತವರು ಕ್ಷೇತ್ರವಾಗಿರುವ ದೆಸೆಯಿಂದ ಮೈಸೂರು ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಎಚ್ಚರಿಕೆಯಿಂದ ಜನರ ಸೇವೆ ಮಾಡಬೇಕು. ಬಂದವರ ಕಷ್ಟ ಪರಿಹರಿಸುವ ಸಲುವಾಗಿ ಕೆಲಸ ಮಾಡುತ್ತಿದ್ದೇವೆ. ಸರ್ಕಾರಿ ಸೇವೆಗೆ ಎಲ್ಲಿ ಲೋಪ ಬರುತ್ತದೆಯೋ, ಅದನ್ನು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ 80ಕ್ಕೂ ಹೆಚ್ಚು ಅರ್ಜಿಗಳು ಮತ್ತು ಸಮಸ್ಯೆಗಳು ಕಂಡುಬಂದಿವೆ. ಅವುಗಳನ್ನು ಶೀಘ್ರದಲ್ಲೇ ಪರಿಹರಿಸಲು ನಾನು ಮುಂದಾಗುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯತ್ರಿ, ಕಾರ್ಯದರ್ಶಿ ಕೃಷ್ಣ ರಾಜು, ತಾಲೂಕು ಪಂಚಾಯತಿ, ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ನಗರಸಭಾ ಆಯುಕ್ತ ನಂಜುಂಡಸ್ವಾಮಿ ಸೇರಿದಂತೆ ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.