ಮಾದಪ್ಪನ ಹುಂಡಿಯಲ್ಲಿ ೧.೬೪ ಕೋಟಿ ರೂ. ಸಂಗ್ರಹ
ಚಾಮರಾಜನಗರ.ಸೆ.೨೭-ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ೨೮ ದಿನಗಳ ಅವಧಿಯಲ್ಲಿ ೧.೬೪ ಕೋಟಿ ರೂ. ಸಂಗ್ರಹವಾಗಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮಿಯವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆಯು ಸಂಜೆ ೫ ಗಂಟೆಯವರೆಗೂ ನಡೆಯಿತು.
ಶ್ರಾವಣ ಮಾಸದ ಕುಂಬೋತ್ಸವ, ಅಮಾವಾಸ್ಯೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ೧.೬೪ ಕೋಟಿ ರೂ. ನಗದು, ೨೧ ಗ್ರಾಂ ಚಿನ್ನ ಹಾಗೂ ೨ ಕೆಜಿ ೧೦೦ ಗ್ರಾಂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. ದೇಗುಲದ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್ ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.