ದುರಸ್ಥಿಯಲ್ಲಿರುವ ಆರ್.ಓ. ಘಟಕ ಸರಿಪಡಿಸಿ, ಶುದ್ಧ ನೀರು ಪೂರೈಕೆ ಮಾಡಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜು.೪; ಜಿಲ್ಲೆಯಲ್ಲಿ ದುರಸ್ಥಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೆ ಸರಿಪಡಿಸಿ, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇದೇ ಜುಲೈ 8 ಮತ್ತು 9 ರಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರೊಂದಿಗೆ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಏರ್ಪಡಿಸಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ಮೊದಲ ಆದ್ಯತೆಯಾಗಿದ್ದು, ದುರಸ್ಥಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣವೇ ಸರಿಪಡಿಸಿ, ಕಾರ್ಯಾರಂಭ ಮಾಡುವಂತೆ ಕ್ರಮವಹಿಸಬೇಕು. ಇದರ ಜೊತೆಗೆ ಕುಡಿಯುವ ನೀರಿನ ವಿತರಣೆ ವ್ಯವಸ್ಥೆಯಲ್ಲಿ ಸಮಸ್ಯೆಗಳಿದ್ದರೂ ಬಗೆಹರಿಸಿ, ನೀರು ಪೂರೈಕೆಗೆ ಅಗತ್ಯ ಕ್ರಮವಹಿಸಬೇಕು ಎಂದು ಹೇಳಿದರು.ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಎಷ್ಟು ನೀರಿನ ಮಾದರಿಯ ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ ಎಂಬ ವರದಿ ಸಲ್ಲಿಸಬೇಕು. ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ, ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಬೇಕು. ಯಾವುದೇ ಕಾರಣಕ್ಕೂ ಕವಾಡಿಗರಹಟ್ಟಿಯಲ್ಲಿ ಸಂಭವಿಸಿದ ಕಲುಷಿತ ನೀರು ಸೇವನೆಯ ಪ್ರಕರಣದಂತಹ ಘಟನೆಗಳು ಮರುಕಳಿಸುವಂತಾಗಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (ಎಬಿಎಆರ್‍ಕೆ) ಯೋಜನೆಯಡಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‍ನವರಿಗೆ ಸರ್ಕಾರದಿಂದ ವೈದ್ಯಕೀಯ ವೆಚ್ಚ ಭರಿಸುವ  ಸೌಲಭ್ಯವಿದ್ದು, ಜಿಲ್ಲೆಯಲ್ಲಿ ಈ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣು ಪ್ರಸಾದ್ ಅವರಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ 18 ಲಕ್ಷ ಜನಸಂಖ್ಯೆ ಇದ್ದು, ಸಿಎಸ್‍ಸಿ ಹಾಗೂ ನಾಡಕಚೇರಿಗಳಲ್ಲಿಯೂ ಎಬಿಎಆರ್‍ಕೆ ಕಾರ್ಡ್ ನೋಂದಣಿಗೆ ಕ್ರಮವಹಿಸುವಂತೆ ತಾಕೀತು ಮಾಡಿದರು.