ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥ ಪ್ರಕರಣ:ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಸ್ವಯಂ ಪ್ರೇರಿತ ದೂರು ದಾಖಲು
ಕಲಬುರಗಿ:ಜು.3: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕನಗನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಬಿಸಿ ಉಟ ಸೇವಿಸಿ ಅಸ್ವಸ್ಥಗೊಂಡ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿರುವ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗದ ಸದಸ್ಯೆ ಅಪರ್ಣಾ ಎಂ. ಕೊಳ್ಳಾ ಅವರು, ಈ ಕುರಿತು ಆಯೋಗವು ಪ್ರಕಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.
ಶಾಲಾ ಮಕ್ಕಳು ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಡಿ.ಸಿ.ಪಿ.ಓ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಬಿಸಿ ಊಟ ತಯಾರಿಕೆ ಮತ್ತು ಬಡಿಸುವಾಗ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವಂತೆ ಶಾಲಾ‌ ಮುಖ್ಯಸ್ಥರಿಗೆ ಸುತ್ತೋಲೆ ಹೊರಡಿಸುವಂತೆ ಡಿ.ಡಿ.ಪಿ.ಐ ಅವರಿಗೆ ಸೂಚನೆ ನೀಡಿದ್ದಾರೆ.
ಇಂತಹ ಪ್ರಕರಣ ಮರುಕಳಿಸದಂತೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧೀನದ ವಸತಿ ಶಾಲೆ‌ ಮತ್ತು ವಸತಿ ನಿಲಯದಲ್ಲಿಯೂ ಸಹ ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಅವರು ತಿಳಿಸಿದ್ದಾರೆ.