ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 20 ವರ್ಷ, ಸಹಾಯ ಮಾಡಿದ ತಂದೆಗೆ 10 ವರ್ಷ ಜೈಲು ಶಿಕ್ಷೆ
ಕಲಬುರಗಿ,ಜು.2-ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 20 ವರ್ಷ ಮತ್ತು ಆರೋಪಿಗೆ ಸಹಾಯ ಮಾಡಿದ ತಂದೆಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಇಲ್ಲಿ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯ ತೀರ್ಪು ನೀಡಿದೆ.
ಆರೋಪಿ ಯಲ್ಲಪ್ಪ ಅಲಿಯಾಸ್ ಯಲ್ಲಾಲಿಂಗ ಯಡ್ರಾಮಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುವುದಾಗಿ ಮತ್ತು ಮದುವೆಯಾಗುವುದಾಗಿ ಪುಸಲಾಯಿಸಿ ಬಾಲಕಿಯನ್ನು ಪುನಾದಲ್ಲಿರುವ ತನ್ನ ಸಹೋದರಿಯ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ. ಬಾಲಕಿಯನ್ನು ಪುನಾಕ್ಕೆ ಕರೆದುಕೊಂಡು ಹೋಗಲು ಆರೋಪಿಯ ತಂದೆ ದೇವಿಂದ್ರಪ್ಪ ಅಲಿಯಾಸ್ ದೇವಪ್ಪ ಯಡ್ರಾಮಿ ಸಹಾಯ ಮಾಡಿದ್ದ. ಈ ಸಂಬಂಧ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜೇವರ್ಗಿ ಸಿಪಿಐ ಭೀಮನಗೌಡ ಬಿರಾದಾರ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ತನಿಖೆ ನಡೆಸಿದ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯ-ಎಫ್‍ಟಿಎಸ್‍ಸಿ-1ರ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಆರೋಪಿ ಯಲ್ಲಪ್ಪ ಯಡ್ರಾಮಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರೂ.ದಂಡ, ಆತನ ತಂದೆ ದೇವಿಂದ್ರಪ್ಪ ಯಡ್ರಾಮಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ.ದಂಡ ವಿಧಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು.