ಶಸ್ತ್ರಚಿಕಿತ್ಸಕ ಡಾ.ವಿಜಯಕುಮಾರ್‌ಗೆ ಬೀಳ್ಕೊಡುಗೆ
ಕೋಲಾರ,ಜು,೨:ಜಿಲ್ಲಾ ಎಸ್‌ಎನ್‌ಆರ್ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ಎಸ್.ಎನ್.ವಿಜಯಕುಮಾರ್ ಅವರನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ವಿಜಯಕುಮಾರ್, ತಮ್ಮ ಸೇವಾ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ ಆತ್ಮತೃಪ್ತಿ ಇದೆ, ನನ್ನ ಕರ್ತವ್ಯ ನಿರ್ವಹಣೆಗೆ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ವೈದ್ಯರು, ಶುಶ್ರೂಷಕಿಯರು,ಸಿಬ್ಬಂದಿ ಎಲ್ಲರೂ ಸಹಕಾರ ನೀಡಿದ್ದು ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.
ಆರೋಗ್ಯ ಇಲಾಖೆ ಪ್ರಯೋಗಶಾಲಾ ತಾಂತ್ರಿಕರ ಸಂಘದ ನಾರಾಯಣಪ್ಪ ಮಾತನಾಡಿ, ಆರೋಗ್ಯ ಇಲಾಖೆ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ವಿವಿಧಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಇತರರಿಗೆ ಮಾದರಿಯಾಗಿದ್ದ ವಿಜಯಕುಮಾರ್ ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರು ಹಾಗು ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶು ಪಾಲರ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿ ಇದೀಗ ನಿವೃತ್ತರಾಗಿರುವ ವಿಜಯಕುಮಾರ್ ಅವರು, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಶೆಟ್ಟಿಹಳ್ಳಿಯಲ್ಲಿ ವಿಮಲಮ್ಮ ನಾರಾಯಣನ್ ದಂಪತಿಗಳ ಮಗನಾಗಿ ಜನಿಸಿದ ಇವರು ತನ್ನ ೧೯೮೧ರಿಂದ ೧೯೮೭ ವೈದ್ಯಕೀಯ ಪದವಿ ಬಳ್ಳಾರಿ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಮುಗಿಸಿ ನಂತರ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಮೂಳೆ ತಜ್ಞರಾಗಿ ಸ್ನಾತಕೋತ್ತರ ಪದವಿ ಮುಗಿಸಿದ್ದಾರೆ ಎಂದು ತಿಳಿಸಿದರು.
೧೯೯೧ರಲ್ಲಿ ಮುಳಬಾಗಿಲು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೊದಲು ವೈದ್ಯರಾಗಿ ಸೇರಿ ಅಲ್ಲಿ ಕರ್ತವ್ಯ ನಿರ್ವಹಿಸಿ, ನಂತರ ಅಲ್ಲಿಂದ ತಾಯಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ, ನಂತರ ಮುಳಬಾಗಿಲು ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಇದಾದ ನಂತರ ಯಲ್ದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡಿದ್ದಾರೆ.
ಇದಾದ ನಂತರ ಜಿಲ್ಲಾ ಕ್ಷಯರೋಗ ನಿವಾರಣಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ವಿಜಯಕುಮಾರ್, ಕೀಲು ಮತ್ತು ಮೂಳೆ ತಜ್ಞರಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿ ನಂತರ ಜಿಲ್ಳಾ ಆರೋಗ್ಯಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾಗಿ ಸೇವೆ ಸಲ್ಲಿಸಿದರು.ನಂತರ ೨೦೨೨ರಲ್ಲಿ ಜಿಲ್ಲಾಆಸ್ಪತ್ರೆ ಜಿಲ್ಲಾ ಶಸ್ತ್ರ ಚಿಕಿತ್ಸಕರು ಹಾಗು ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶು ಪಾಲರ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ಸೇವೆಯಿಂದ ನಿವೃತ್ತರಾಗಿದ್ದಾರೆ.
ಸದಾ ಜನಸ್ನೇಹಿಯಾಗಿ ರೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಡಾ.ವಿಜಯಕುಮಾರ್ ಅವರ ನಿವೃತ್ತಿ ಜೀವನ ಸುಖಕರವಾಗಿರಲಿ, ನಿವೃತ್ತಿ ನಂತರವೂ ರೋಗಿಗಳಿಗೆ ಅವರ ಸೇವೆ ಸಿಗಲಿ ಎಂದು ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ, ಶುಶ್ರೂಷಕಿಯರು ಸೇರಿದಂತೆ ಹಲವಾರು ಮಂದಿ ಹಾಜರಿದ್ದರು.