ಬೆಂಗಳೂರು: ಶ್ವಾಸಕೋಶದ ಕ್ಯಾನ್ಸರ್ ನಿಂದ ನಿಧನ ಹೊಂದಿದ ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ವಸ್ತಾರೆ ಅವರ ಅಂತ್ಯಕ್ರಿಯೆ ಸಕಲ ಪೊಲೀಸ್ ಗೌರವಗಳೊಂದಿಗೆ ಶುಕ್ರವಾರ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿತು.ಅಪರ್ಣಾ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ಮಧ್ಯಾಹ್ನದವರೆಗೆ ಬನಶಂಕರಿಯಲ್ಲಿರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಮುನಿರತ್ನ, ಹಿರಿಯ ನಟರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ರಮೇಶ್ ಅರವಿಂದ್, ರಮೇಶ್ ಭಟ್, ಸುಂದರ್ ರಾಜ್, ಶ್ರೀನಾಥ್, ಸೃಜನ್ ಲೋಕೇಶ್, ನಿರ್ದೇಶಕ ಎಸ್.ನಾರಾಯಣ್ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದರು.  ಬಳಿಕ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಬನಶಂಕರಿಯ ವಿದ್ಯುತ್ ಚಿತಾಗಾರಕ್ಕೆ ತೆಗೆದುಕೊಂಡು ಹೋಗಲಾಯಿತು. ನಂತರ ಮೂರು ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ಗೌರವ ವಂದನೆ ಸಲ್ಲಿಸಿದರು. ಅನಂತರ ಅಂತ್ಯಕ್ರಿಯೆ ನಡೆಯಿತು.  