Photo : x/@sstangadagiಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ಅಕಾಡೆಮಿಗಳಿಗೆ ಅಗತ್ಯವಿರುವ ಅನುದಾನ ನೀಡಲಾಗುವುದು. ಈ ಸಂಬಂಧ ನೂತನ ಅಧ್ಯಕ್ಷರು ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಹೇಳಿದ್ದಾರೆ.ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 14 ಅಕಾಡೆಮಿ ಮತ್ತು 4 ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡ ಅಧ್ಯಕ್ಷರು ಹಾಗೂ ಸದಸ್ಯರ ಜತೆ ಮೊದಲ ಬಾರಿಗೆ ಸಮಾಲೋಚನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.  ಚುನಾವಣಾ ನೀತಿ ಸಂಹಿತೆ ಕಾರಣ ಅಕಾಡೆಮಿ, ಪ್ರಾಧಿಕಾರದ ನೂತನ ಅಧ್ಯಕ್ಷರು ಮತ್ತು ಸದಸ್ಯರ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಇದೀಗ ಎಲ್ಲರೊಂದಿಗೆ ಸಭೆ ನಡೆಸಿದ್ದೇನೆ. ಪ್ರತಿ ತಿಂಗಳು ಎರಡು ಅಕಾಡೆಮಿಗಳ ಕಾರ್ಯ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುತ್ತದೆ. ಅಲ್ಲದೆ, ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳವಣಿಗೆಯಲ್ಲಿ ಪ್ರಾಧಿಕಾರ ಮತ್ತು ಅಕಾಡೆಮಿಗಳು ರಾಜೀಯಾಗದೆ ಕೆಲಸ ಮಾಡಬೇಕು ಎಂಬುದು ನಮ್ಮ ಆಶಯ ಎಂದು ತಿಳಿಸಿದರು.  ಸಭೆಯಲ್ಲಿ ಹಲವು ಹಿರಿಯರು ಸಲಹೆಗಳನ್ನು ನೀಡಿದ್ದು, ಎಲ್ಲರನ್ನು ಒಟ್ಟಾಗಿ ಕರೆದೊಯ್ಯಲಾಗುವುದು. ಎಲ್ಲರೂ ಇಲಾಖೆ ಮತ್ತು ಸರಕಾರ ಘನತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದ ಅವರು, ನಾನು ಕಲ್ಯಾಣ ಕರ್ನಾಟಕ ಭಾಗದವನಾಗಿದ್ದು, ಈ ಭಾರಿ ಅಕಾಡೆಮಿ ಮತ್ತು ಪ್ರಾಧಿಕಾರದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ ಎಂದರು.   ಸಮಿತಿ ರಚನೆ: ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಅವರ ತತ್ವ ಸಿದ್ದಾಂತವನ್ನು ಪ್ರಚಾರಪಡಿಸಲು ಹಾಗೂ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷದ ತುಂಬಿದ ಹಿನ್ನೆಲೆಯಲ್ಲಿ ಅನುಷ್ಠಾನಗೊಳಿಸಬೇಕಾದ ಕಾರ್ಯಕ್ರಮಗಳನ್ನು ರೂಪಿಸಲು ಅಕಾಡೆಮಿಗಳ ಅಧ್ಯಕ್ಷರು ಹಾಗೂ ಸದಸ್ಯರನ್ನೊಳಗೊಂಡ ಸಮನ್ವಯ ಸಮಿತಿ ರಚನೆ ಮಾಡಲಾಗುವುದು ಅವರು ತಿಳಿಸಿದರು.  ಸಭೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ್ ಬಿಳಿಮಲೆ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಚನ್ನಪ್ಪ ಕಟ್ಟಿ, ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜ್ ಮೂರ್ತಿ, ಇಲಾಖಾ ಕಾರ್ಯದರ್ಶಿ ಅಜಯ್ ನಾಗಭೂಷಣ್, ನಿರ್ದೇಶಕಿ ಡಾ.ಧರಣಿ ಸೇರಿದಂತೆ ಪ್ರಮುಖರಿದ್ದರು.  