ಬೆಂಗಳೂರು : ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸರಕಾರಿ ಅಭಿಯೋಜಕರಾಗಿ ಎಸ್.ಬಾಲನ್ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.ಮುಸ್ಲಿಂ ಮಹಿಳೆಯರ ಬಗ್ಗೆ ಹೇಳಿಕೆ ಕುರಿತು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ಅವರನ್ನು ರಾಜ್ಯ ಸರಕಾರ ನೇಮಿಸಿತ್ತು. ಸರಕಾರದ ನೇಮಕ ಪ್ರಶ್ನಿಸಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಎಸ್.ಬಾಲನ್ ನೇಮಕಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿದೆ.2023 ಡಿಸೆಂಬರ್ 24ರಂದು ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.  ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ದೂರು ನೀಡಿದ್ದರು. ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ‌ ಪ್ರಭಾಕರ್ ಭಟ್ ವಿರುದ್ಧ IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್‌ಐಆರ್ ದಾಖಲಾಗಿದೆ.ಈ ಎಫ್​ಐಆರ್ ರದ್ದು ಕೋರಿ ಪ್ರಭಾಕರ್ ಭಟ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಈ ಪ್ರಕರಣ ವಿಚಾರಣೆ ಸಂದರ್ಭದಲ್ಲಿ ಸರಕಾರದ ಪರ ವಾದ ಮಂಡಿಸಲು ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ನೇಮಕ ಮಾಡಿ ಸರಕಾರ ಆದೇಶಿತ್ತು.