ಹುಬ್ಬಳ್ಳಿ: ವಿಧಾನಪರಿಷತ್ತಿನ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಗುರುವಾರ ಹುಬ್ಬಳ್ಳಿಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿಯನ್ನು ಭೇಟಿ ಮಾಡಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ವೈಯಕ್ತಿಕ ಕಾರಣದಿಂದ ನಾನು ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಅದನ್ನು ಸಭಾಪತಿ ಅಂಗೀಕಾರ ಮಾಡಿದ್ದಾರೆ. ವಿಧಾನಪರಿಷತ್ ಸದಸ್ಯತ್ವದ ಜೊತೆಗೆ ನಾನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮರಿತಿಬ್ಬೇಗೌಡ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.ನಾನು ಮೊದಲು ಮೊದಲು ಕಾಂಗ್ರೆಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯನಾಗಿದ್ದೆ. ನಂತರ ಒಮ್ಮೆ ಪಕ್ಷೇತರನಾಗಿ ಹಾಗೂ ಸತತ ಎರಡು ಬಾರಿ ಜೆಡಿಎಸ್ ಪಕ್ಷದಿಂದ ಗೆಲುವು ಸಾಧಿಸಿದ್ದೆ. ಪಕ್ಷದಲ್ಲಿ ನಾನು ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದೇನೆ ಎಂದು ಅವರು ಹೇಳಿದರು.ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ನಮ್ಮ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸಲಿಲ್ಲ, ನಮ್ಮ ಮಾತುಗಳಿಗೆ ಗೌರವ ನೀಡಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕಣಕ್ಕಿಳಿಸುವುದು ಬೇಡ, ಮಂಡ್ಯದವರಿಗೆ ಟಿಕೆಟ್ ನೀಡುವಂತೆ ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದೆ. ಆದರೆ, ನನ್ನ ಮಾತು ಅವರಿಗೆ ಇಷ್ಟವಾಗಲಿಲ್ಲ ಎಂದು ಮರಿತಿಬ್ಬೇಗೌಡ ತಿಳಿಸಿದರು.ನಾನು ಪ್ರತಿನಿಧಿಸುವ ಶಿಕ್ಷಕರ ಕ್ಷೇತ್ರದ ಮತದಾರ ಬಂಧುಗಳ ಜೊತೆ ಸಮಾಲೋಚನೆ ಮಾಡಿಯೇ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದೇನೆ. ನನ್ನ ಮುಂದಿನ ರಾಜಕೀಯ ನಡೆಯ ಬಗ್ಗೆ ಶೀಘ್ರವೆ ತಿಳಿಸುತ್ತೇನೆ ಎಂದು ಅವರು ಹೇಳಿದರು.ಬಿಜೆಪಿ-ಜೆಡಿಎಸ್ ಮೈತ್ರಿಗೆ ವಿರೋಧ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಮರಿತಿಬ್ಬೇಗೌಡ, ನಮ್ಮ ಪಕ್ಷದ ನಾಯಕರು ಮೊಸಳೆ ಮೇಲೆ ಸವಾರಿ ಮಾಡಲು ಹೊರಟಿದ್ದಾರೆ. ಇದು ಪಕ್ಷದ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ ಎಂದರು.ರಾಜೀನಾಮೆ ಅಂಗೀಕರಿಸಿದ ಹೊರಟ್ಟಿಮರಿತಿಬ್ಬೇಗೌಡ ಸ್ವ ಇಚ್ಛೆಯಿಂದ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಗಿ ಹೇಳಿದ್ದಾರೆ. ನಾನು ಅವರಿಗೆ ಕೇಳಬೇಕಿರುವ ಎಲ್ಲ ಪ್ರಶ್ನೆಗಳನ್ನು ಕೇಳಿದ್ದೇನೆ. ಅವರಿಂದ ಉತ್ತರವನ್ನು ಪಡೆದುಕೊಂಡಿದ್ದೇನೆ. ಹೀಗಾಗಿ, ಅವರು ಕೊಟ್ಟಿರುವ ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ.ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ