ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹೆಚ್ಚುವರಿ ಅನುದಾನ ಒದಗಿಸುವಂತೆ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.  ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ನೇತೃತ್ವದ ನಿಯೋಗದಲ್ಲಿದ್ದ ಮುಖಂಡರು, ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು. ಅಲ್ಲದೆ, ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ಒದಗಿಸುವಂತೆ ಕೋರಿದರು.  ನಿಯೋಗದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್, ಪರಿಷತ್ತಿನ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ತನ್ವೀರ್ ಸೇಠ್, ಎನ್.ಎ.ಹಾರಿಸ್, ಇಕ್ಬಾಲ್ ಹುಸೇನ್, ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.   