ಬೆಂಗಳೂರು: ರಾಜ್ಯ ಸರಕಾರವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸೇರಿದಂತೆ ಎಂಟು ಉಪ ವಿಭಾಗಗಳಿಗೆ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿಗಳನ್ನು ನೂತನ ಸಹಾಯಕ ಆಯುಕ್ತರನ್ನಾಗಿ ನೇಮಿಸಿ ಬುಧವಾರ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಜುಬಿನ್ ಮೊಹಪಾತ್ರ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಅಪರ್ಣಾ ರಮೇಶ್, ಕಾರವಾರ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಕಾನಿಷ್ಕಾರನ್ನು ನೇಮಕ ಮಾಡಲಾಗಿದೆ.ಕೊಡಗು ಜಿಲ್ಲೆಯ ಮಡಿಕೇರಿ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ನಾರ್ವಡೆ ವಿನಾಯಕ ಕರ್ಭರಿ, ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ದಲ್ಜೀತ್ ಕುಮಾರ್, ಶಿವಮೊಗ್ಗ ಜಿಲ್ಲೆಯ ಸಾಗರ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಯತೀಶ್ ಆರ್. ಅವರನ್ನು ನೇಮಕ ಮಾಡಲಾಗಿದೆ.ಮೈಸೂರು ಜಿಲ್ಲೆಯ ಹುಣಸೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಮುಹಮ್ಮದ್ ಹಾರಿಸ್ ಸುಮೈರ್ ಹಾಗೂ ಕಲಬುರಗಿ ಜಿಲ್ಲೆಯ ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ರೂಪಿಂದರ್ ಕೌರ್ ಅವರನ್ನು ನೇಮಕಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ ಉಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಹೊಸದಾಗಿ ನೇಮಕಗೊಂಡ ಎಲ್ಲ ಎಂಟು ಸಹಾಯಕ ಆಯುಕ್ತರು 2021ನೆ ಬ್ಯಾಚ್ ನ ಐಎಎಸ್ ಅಧಿಕಾರಿಗಳಾಗಿದ್ದಾರೆ.ವರ್ಗಾವಣೆ: ಮೈಸೂರು ಜಿಲ್ಲೆಯ ಹುಣಸೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿದ್ದ ರುಚಿ ಬಿಂದಾಲ್ ಅವರನ್ನು ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿಯಾಗಿ ಹಾಗೂ ಬೀದರ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಶಿಲ್ಪಾ ಅವರನ್ನು ಬಿಎಂಟಿಸಿಯ ನಿರ್ದೇಶಕಿ(ಐಟಿ)ಯಾಗಿ ವರ್ಗಾವಣೆ ಮಾಡಲಾಗಿದೆ.ರಾಜ್ಯ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕ ಡಾ.ಗಿರೀಶ್ ದಿಲಿಪ್ ಬಡೋಲೆ ಅವರನ್ನು ಬೀದರ್ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ