ಸಾಂದರ್ಭಿಕ ಚಿತ್ರ Photo: twitter/cmofkarnatakaಬೆಂಗಳೂರು, ನ 24: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27 ರಂದು ಬೆಳಿಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದರು. ಇದೀಗ ಸ್ವತಃ ಮುಖ್ಯಮಂತ್ರಿಯವರು ಬೆಂಗಳೂರಿನಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಬಗೆಹರಿಸಲು ಕ್ರಮ ಕೈಗೊಳ್ಳಲಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ನಡೆಯಲಿರುವ ಈ ಕಾರ್ಯಕ್ರಮದ ಹೊಣೆಗಾರಿಕೆ ಎಲ್ಲ ಜಿಲ್ಲಾಧಿಕಾರಿಗಳು, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ. ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಕಾಳಜಿ ಈ ‘ಜನತಾ ದರ್ಶನ’ ಹೊಂದಿದೆ.