ಬೆಂಗಳೂರು, ನ. 10: ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಪುತ್ರ, ಹಾಲಿ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದ್ದಾರೆ.  ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಚುನಾಯಿತರಾಗಿರುವ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಮೇಲುಗೈ ಸಾಧಿಸುವಂತಾಗಿದೆ.  ನಿಕಟಪೂರ್ವ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಅವಧಿ ಪೂರ್ಣಗೊಂಡಿದ್ದ ಹಿನ್ನೆಲೆಯಲ್ಲಿ ಇದೀಗ ಆ ಸ್ಥಾನಕ್ಕೆ ವಿಜಯೇಂದ್ರರನ್ನು ನಿಯೋಜನೆ ಮಾಡಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದಯನೀಯ ಸೋಲನ್ನು ಅನುಭವಿಸಿತ್ತು. ಆ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕೆಂದು ಪಕ್ಷದ ವರಿಷ್ಠರು ತೀವ್ರವಾಗಿ ತಲೆಕೆಡಿಸಿಕೊಂಡಿದ್ದರು.  ಈ ಬೆಳವಣಿಗೆಗಳ ನಡುವೆಯೆ ಹಿರಿಯ ಶಾಸಕರಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ಸಿ.ಟಿ.ರವಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಮಂದಿಯ ಹೆಸರುಗಳು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಳಿಬಂದಿದ್ದವು.  ಆದರೆ, ಅಂತಿಮವಾಗಿ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ರಾಜ್ಯದಲ್ಲಿನ ಪ್ರಬಲ ವೀರಶೈವ ಲಿಂಗಾಯತ ಸಮುದಾಯದವರಿಗೆ ಬಿಜೆಪಿ ಪ್ರಾತಿನಿಧ್ಯ ನೀಡಿದೆ. ಅಲ್ಲದೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲುವಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಪಕ್ಷ ಸಂಘಟನೆ, ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುವ ದೃಷ್ಟಿಯಿಂದ ವಿಜಯೇಂದ್ರ ಅವರಿಗೆ ಸ್ಥಾನ ಕಲ್ಪಿಸಲಾಗಿದೆ ಎಂದು ಹೇಳಲಾಗುತ್ತಿದೆ.  ಪ್ರತಿಪಕ್ಷ ನಾಯಕ ಸ್ಥಾನ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ಮಂದಿ ಆಕಾಂಕ್ಷಿಗಳಾಗಿದ್ದು, ಯಾರಿಗೆ ವಿಪಕ್ಷ ನಾಯಕನ ಸ್ಥಾನ ನೀಡಲಿದ್ದಾರೆಂಬ ಕುತೂಹಲ ಸೃಷ್ಟಿಸಿದೆ. ಪ್ರಬಲ ವೀರಶೈವ ಲಿಂಗಾಯತ ಸಮುದಾಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದು, ಪ್ರತಿಪಕ್ಷ ನಾಯಕನ ಸ್ಥಾನವನ್ನು ದಲಿತ ಅಥವಾ ಒಕ್ಕಲಿಗ ಸಮುದಾಯದ ಮುಖಂಡರಿಗೆ ನೀಡುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.   