ಬೆಂಗಳೂರು, ಅ.14: ಬಿಎಂಟಿಸಿ ಬಸ್ ಹರಿದು ಖಾಸಗಿ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಇಲ್ಲಿನ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಇಂಜಿನಿಯರಿಂಗ್ ವಿದ್ಯಾರ್ಥಿ ಗಂಗಾಧರ್ (21) ಮೃತಪಟ್ಟಿದ್ದಾರೆ ಎಂದು ಪೊಲೀಸರು ಗುರುತಿಸಿದ್ದಾರೆ.  ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಗಂಗಾಧರ್ ಎಚೆಎಲ್‍ನಲ್ಲಿ ಇಂಟರ್ನ್‍ಶಿಪ್‍ಗೆಂದು ಕಾಲೇಜಿನಿಂದ ಪ್ರಮಾಣ ಪತ್ರ ಪಡೆಯಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದನು. ಈ ವೇಳೆ, ಬಿಎಂಟಿಸಿ ಬಸ್ ಹಿಂಭಾಗ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾದ ಪರಿಣಾಮ ಗಂಗಾಧರ್ ನೆಲಕ್ಕೆ ಬಿದ್ದಿದ್ದು, ಬಸ್ಸಿನ ಹಿಂಬದಿ ಚಕ್ರ ಗಂಗಾಧರನ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.  ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಯಶವಂತಪುರ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.  