ಬೆಂಗಳೂರು, ಅ.10: ವಿಧಾನಸಭಾ ಚುನಾವಣೆ ವೇಳೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಜ್ರದೇಹಿ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿರುವುದಾಗಿ ವರದಿಯಾಗಿದೆ.ಮಂಗಳೂರಿನ ಗುರುಪುರದಲ್ಲಿರುವ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಉದ್ಯಮಿ ಗೋವಿಂದ ಬಾಬು ಪೂಜಾರಿ ವಿರುದ್ಧ ಜಾರಿ ನಿರ್ದೇಶಾನಲಯಕ್ಕೆ ಪತ್ರ ಬರೆದಿದ್ದರು. ಈ ಪತ್ರದಲ್ಲಿ ವಜ್ರದೇಹಿ ಮಠದ ಸ್ವಾಮೀಜಿ ಹೆಸರನ್ನು ಸಹ ಚೈತ್ರಾ ಪ್ರಸ್ತಾಪ ಮಾಡಿದ್ದರು. ಇದೀಗ ವಂಚನೆ ಪ್ರಕರಣ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಸ್ವಾಮೀಜಿಗೆ ನೋಟಿಸ್​ ನೀಡಿದ್ದಾರೆ. ಆದರೆ ನೋಟೀಸ್‌ ಬಂದ ಬಗ್ಗೆ ಸ್ವಾಮೀಜಿಗಳು ಈವರೆಗೆ ಅಧಿಕೃತವಾಗಿ ಹೇಳಿಕೆ ನೀಡಿಲ್ಲ ಎಂದು ಗೊತ್ತಾಗಿದೆ.