ಬೆಂಗಳೂರು, ಸೆ.25: ರಾಜ್ಯದ ಇತಿಹಾದಲ್ಲೇ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಕೈಗೊಂಡಿರುವ ‘ಜನತಾ ದರ್ಶನ’ ಕಾರ್ಯಕ್ರಮ ಇಂದು(ಸೆ.25) ಜರುಗಲಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ನಡೆಯಲಿರುವ ಈ ಕಾರ್ಯಕ್ರಮದ ಹೊಣೆಗಾರಿಕೆ ಎಲ್ಲ ಜಿಲ್ಲಾಧಿಕಾರಿಗಳು, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ. ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಕಾಳಜಿ ಈ ‘ಜನತಾ ದರ್ಶನ’ ಹೊಂದಿದೆ.  ಆಡಳಿತಕ್ಕೆ ಚುರುಕು ಮುಟ್ಟಿಸಿ, ಸರಕಾರಿ ಯಂತ್ರಾಂಗವನ್ನು ಕ್ರಿಯಾಶೀಲಗೊಳಿಸುವ ಪ್ರಯತ್ನವಾಗಿ ನಡೆಸಿದ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ಸಿಇಒಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 10 ದಿನಗಳ ಹಿಂದೆ ಒಂದು ಜನತಾ ದರ್ಶನದ ಬಗ್ಗೆ ಸೂಚನೆ ನೀಡಿದ್ದರು. ಜಾತಿ ಪ್ರಮಾಣಪತ್ರ, ಖಾತೆ ಬದಲಾವಣೆ, ಟ್ರಾನ್ಸ್ ಫಾರ್ಮರ್ ರಿಪೇರಿ, ವಿದ್ಯುತ್ ಕಂಬ ಅಳವಡಿಕೆಯಂತಹ ಸಣ್ಣಪುಟ್ಟ ಕೆಲಸಗಳಿಗೂ ಜನ ನನ್ನ ಬಳಿಗೆ ಬರುತ್ತಿದ್ದಾರೆ. ನಾನು ಜಿಲ್ಲೆಗಳಿಗೆ ಭೇಟಿ ನೀಡಿದಾಗ ಜನರು ಇಷ್ಟು ಸಣ್ಣ ಪುಟ್ಟ ಕೆಲಸಗಳಿಗೂ ನನ್ನನ್ನು ಹುಡುಕಿಕೊಂಡು ಬರುವಂತಾಗಿದೆ ಎಂದರೆ ನೀವುಗಳಿದ್ದೂ ಏನು ಪ್ರಯೋಜನ ಎಂದು ಸಿಎಂ ಸಭೆಯಲ್ಲಿ ಪ್ರಶ್ನಿಸಿದ್ದರು. ಬಳಿಕ ಪ್ರತಿ ಜಿಲ್ಲೆ ಮತ್ತು ತಾಲೂಕುಗಳಲ್ಲೂ ಜನತಾ ದರ್ಶನ ನಡೆಸಬೇಕು ಎನ್ನುವ ಸೂಚನೆಯನ್ನೂ ಹೊರಡಿಸಿದ್ದರು. ಈ ಹಿನ್ನೆಲೆ ಸೆ.25ರಂದು ರಾಜ್ಯಾದ್ಯಂತ ಏಕಕಾಲಕ್ಕೆ ‘ಜನತಾ ದರ್ಶನ’ ನಿಗದಿಯಾಗಿದೆ.ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ಸಿಇಒಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜನತಾ ದರ್ಶನ ನಡೆಸಲಿದ್ದಾರೆ. ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿರಲಿದ್ದಾರೆ. ಇವರೆಲ್ಲರ ನಡುವೆ ಸಮನ್ವಯ ಸಾಧಿಸಿ ಜನತಾ ದರ್ಶನ ಅರ್ಥಪೂರ್ಣವಾಗಿ ಮತ್ತು ಫಲಪ್ರದವಾಗುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಹಿರಿಯ ಐಎಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ.  ಪ್ರತಿ ಜಿಲ್ಲೆಯಲ್ಲೂ ನಿಗದಿತ ಸ್ಥಳದಲ್ಲಿ ನಿಗದಿತ ಸಮಯಕ್ಕೆ ಜನತಾ ದರ್ಶನ ಆರಂಭವಾಗಬೇಕು ಎಂದು ಸರಕಾರ ಸೂಚನೆ ಹೊರಡಿಸಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಈ ಅಹವಾಲುಗಳಿಗೆ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಒದಗಿಸುವುದು ಪ್ರಥಮ ಆದ್ಯತೆಯಾಗಿರುತ್ತದೆ. ತಾಂತ್ರಿಕ ಕಾರಣಗಳಿಂದ ಇದು ಸಾಧ್ಯವಾಗದಿದ್ದರೆ ಸಾರ್ವಜನಿಕರ ಅಹವಾಲುಗಳು ಸ್ಥಳದಲ್ಲೇ ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ವರ್ಗಾವಣೆಗೊಳ್ಳುತ್ತವೆ. ಎಲ್ಲದಕ್ಕೂ ಕಾಲ ಮಿತಿಯಲ್ಲಿ ಪರಿಹಾರ ಒದಗಿಸುವ ಮತ್ತು ಸಾರ್ವಜನಿಕರು ನೀಡಿದ ಅಹವಾಲಿನ ಸ್ಥಿತಿಗತಿಯನ್ನು ಅರ್ಜಿದಾರರಿಗೆ ಜಿಲ್ಲಾಡಳಿತ ಮನವರಿಕೆ ಮಾಡಿಕೊಡಬೇಕೆಂದು ಸೂಚಿಸಲಾಗಿದೆ.