ಮೃತ ದಂಪತಿಕೋಲಾರ: ಇತ್ತೀಚೆಗೆ ತಾಲೂಕಿನ ಮಣಿಘಟ್ಟ ಬಳಿ ತೋಟದ ಮನೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸಿಡಿದು ಬೆಂಕಿ ಕಾಣಿಸಿಕೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ದಂಪತಿಯನ್ನು ಗಿರೀಶ್ ಹಾಗೂ ನಂದಿನಿ ಎಂದು ಗುರುತಿಸಲಾಗಿದೆ. ಮೃತ ದಂಪತಿ ಮಧುಸೂಧನ್ ಎಂಬವರ ತೋಟದ ಮನೆಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡಿಕೊಂಡು ವಾಸವಿದ್ದರು. ಸೆಪ್ಟಂಬರ್ 16 ರಂದು ಈ ಘಟನೆ ನಡೆದಿದ್ದು, ಕಾಫಿ ಮಾಡುವ ವೇಳೆ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು ಎನ್ನಲಾಗಿದೆ. ಸಿಲಿಂಡರ್ ಬ್ಲಾಸ್ಟ್‌ನಿಂದ ದಂಪತಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ  ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.