ಬೆಂಗಳೂರು: ಹಲವು ದಿನಗಳಿಂದ ಕಾವೇರಿ ಹೋರಾಟದ ಪರವಾಗಿ ಧ್ವನಿ ಎತ್ತದೇ ಇರುವುದಕ್ಕೆ ಕನ್ನಡ ಚಿತ್ರರಂಗದ ನಟ-ನಟಿಯರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ನಟ ದರ್ಶನ್‌ ಮತ್ತು ಸುದೀಪ್ ಪ್ರತಿಕ್ರಿಯಿಸಿದ್ದಾರೆ. ʼʼಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿʼʼ ಎಂದು ದರ್ಶನ್‌ ಟ್ವಿಟರ್‌ ನಲ್ಲಿ ಬರೆದುಕೊಂಡಿದ್ದಾರೆ. ʼʼಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು  ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿʼʼ ಎಂದು ನಟ ಸುದೀಪ್‌ ಟ್ವೀಟ್‌ ಮಾಡಿದ್ದಾರೆ.   