ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.ಇತ್ತೀಚೆಗೆ ಅನಾರೋಗ್ಯದಿಂದ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ ಅವರು ಸೆ.3ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.ಇದೀಗ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ ರಮೇಶ ಜಾರಕಿಹೊಳಿ, ಅವರ ಜೊತೆ ಕೆಲ ಕಾಲ ಮಾತುಕತೆ ನಡೆಸಿದರು. ಹಾಗೆಯೇ ಇಬ್ಬರು ನಾಯಕರು ಗೌರಿ ಗಣೇಶ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.ಆ ಬಳಿಕ ಬಿಜೆಪಿ- ಜೆಡಿಎಸ್‌ ಮೈತ್ರಿ ವಿಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ,  ʼಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟದ್ದು. ನಾನು  ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಲು ಬಂದಿದ್ದೇನೆ. ಮೈತ್ರಿ ವಿಚಾರದ ಬಗ್ಗೆ ಮಾತುಕತೆ ನಡೆಸಲು ಬಂದಿಲ್ಲʼ ಎಂದು ತಿಳಿಸಿದರು. 