ಬೆಂಗಳೂರು, ಸೆ.9: ರಾಜ್ಯ ಸರಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ 2023-24ನೆ ಸಾಲಿನಲ್ಲಿ ಬೆಂಗಳೂರಿನಲ್ಲಿರುವ ಹಜ್ ಭವನದಲ್ಲಿ ನಡೆಯಲಿರುವ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಧಾರ್ಮಿಕ ಅಲ್ಪಸಂಖ್ಯಾತರಾದ ಮುಸ್ಲಿಮ್, ಕ್ರೈಸ್ತ, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ಅಭ್ಯರ್ಥಿಗಳಿಂದ ಸೆ.6ರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆ.16 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕನಿಷ್ಠ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಯ ವಯಸ್ಸು ಕನಿಷ್ಠ 21 ರಿಂದ 35 ವರ್ಷ ಮೀರಿರಬಾರದು. ಈಗಾಗಲೇ ಇಲಾಖೆ-ಖಾಸಗಿ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.  ಕೇಂದ್ರ ಮತ್ತು ರಾಜ್ಯ ಸರಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ. ಅರ್ಜಿದಾರರು ಸೇವಾ ಸಿಂಧು (https://sevasindhu.karnataka.gov.in) ಮತ್ತು ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‍ಸೈಟ್ (https://dom.karnataka.gov.in) ಈ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯದ ಸಹಾಯವಾಣಿ 87222 99990ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರ ಪ್ರಕಟನೆ ತಿಳಿಸಿದೆ.