ಮೈಸೂರು, ಜು.18: ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಿರಿಯಾಪಟ್ಟಣ ಬಳಿಯ ಕಂಪ್ಲಾಪುರ ಗ್ರಾಮ ಬಳಿ ಸಂಭವಿಸಿದೆ.ಮೃತರನ್ನು ಮುದಸ್ಸಿರ್, ಮುಜಾಯಿದ್ ಮತ್ತು ಅಹ್ಮದ್ ಪಾಷಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮುಜಾಸಿರ್ ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಇಂದು ಮುಂಜಾನೆ 4:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರು ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಈ ಭೀಕರ ಅಪಘಾತ ನಡೆದಿದೆ. ಕಂಪ್ಲಾಪುರ ಗ್ರಾಮದ ಸರ್ಕಾರಿ ಪ್ರೌಡಶಾಲೆ ಮುಂಭಾಗ ಹಾಯ್ದು ಹೋಗಿರುವ ಬಿ.ಎಂ.ರಸ್ತೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. 