ಬೆಂಗಳೂರು: ಉಡುಪಿ ಜಿಲ್ಲೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಬೈಲೂರು ಉಮಿಕ್ಕಲ್ ಬೆಟ್ಟದಲ್ಲಿ ನಕಲಿ ಪರಶುರಾಮ ಮೂರ್ತಿ ಸ್ಥಾಪಿಸುವ ಮೂಲಕ ಕಾರ್ಕಳ ಕ್ಷೇತ್ರದ ಶಾಸಕ ಸುನೀಲ್ ಕುಮಾರ್ ಹಿಂದೂಗಳ ಭಾವನೆಗೆ ದಕ್ಕೆ ಉಂಟು ಮಾಡಿದ್ದಾರೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ ಕಾಡಿದ್ದಾರೆ.ಕಾರ್ಕಳದಲ್ಲಿ ನಕಲಿ ಪರಶುರಾಮ ಮೂರ್ತಿ ನಿರ್ಮಿಸಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿ.ಸುನೀಲ್ ಕುಮಾರ್ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಿರಿಯ ನಾಯಕ ಮುನಿಯಾಲು ಉದಯ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಇಂದು ಬೆಂಗಳೂರಿನ  ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದ ಸಚಿವೆ ಬಿಜೆಪಿ ಶಾಸಕ ಸುನೀಲ್‌ಕುಮಾರ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು.  ಸುಳ್ಳನ್ನ ನೂರು ಬಾರಿ ಹೇಳಿ ನಿಜ ಮಾಡುವ ಕಲೆ ಸುನೀಲ್‌ ಕುಮಾರ್ ಅವರಿಗಿದೆ. ನಾನು ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಿಸಿರುವೆ. ನನಗೂ ಗೊತ್ತಿದೆ ಎಷ್ಟು ಸಮಯ ಬೇಕಾಗುತ್ತದೆ ಎಂದು. ಆದರೆ ಕೇವಲ 3 ತಿಂಗಳಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಿಸಲಾಗಿದೆ. ಇಂಥ ಪ್ರತಿಮೆಗಳನ್ನು ನಿರ್ಮಿಸುವಾಗ ವರ್ಷಾನುಗಟ್ಟಲೆ ಸಮಯ ಹಿಡಿಯುತ್ತದೆ. ಚುನಾವಣೆಗಾಗಿ ಕೇವಲ ಮೂರು ತಿಂಗಳಲ್ಲಿ ಪ್ರತಿಮೆ ನಿರ್ಮಾಣ ಕಾರ್ಯ ಮುಗಿಸಿದ್ದು ಕೇಳಿ ಆಶ್ಚರ್ಯ ಉಂಟಾಯಿತು ಎಂದರು.  ಹಿಂದುತ್ವದ ಹೆಸರಿನಲ್ಲಿ ಜನರ ಭಾವನೆಗಳನ್ನು ಕೆರಳಿಸಿ ಮತ ಪಡೆಯುವ ಬಿಜೆಪಿಗರಿಗೆ ಕರಾವಳಿ ಜನತೆ ಮುಂದಿನ ದಿನಗಳಲ್ಲಿ ಪಾಠ ಕಲಿಸಬೇಕಿದೆ. ರಾಮಮಂದಿರ ನಿರ್ಮಾಣಗೊಂಡಿರುವ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋತಿದ್ದು, ಕರಾವಳಿ ಜನರು ಕೂಡ ಬಿಜೆಪಿಗೆ ಪಾಠ ಕಲಿಸಬೇಕಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.  ಅಧಿವೇಶನದಲ್ಲಿ ಸುನೀಲ್‌ ಕುಮಾರ್ ಮುಖ್ಯಮಂತ್ರಿಗಳ ವಿರುದ್ಧ ಟೀಕಾ ಪ್ರಹಾರ ಮಾಡುವುದನ್ನು ನೋಡಿದರೆ ನಾನೊಬ್ಬ ಸಂಭಾವಿತ ಎಂದು ತೋರಿಸಿಕೊಳ್ಳುತ್ತಾರೆ. ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಿ ಜನರ ದಿಕ್ಕನ್ನು ತಪ್ಪಿಸುತ್ತಿರುವ ಸುನೀಲ್ ಕುಮಾರ್ ಮಾಡಿದ ತಪ್ಪಿಗೆ ಶಿಕ್ಷೆಯಾಗಲೇಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಒತ್ತಾಯಿಸಿದರು.  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಈ ಪ್ರತಿಭಟನೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಿಂದ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.  ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ರಮಾನಾಥ್ ರೈ, ವಿನಯ್ ಕುಮಾರ ಸೊರಕೆ, ವಿಧಾನ ಪರಿಷತ್ ಸದಸ್ಯ ರಾದ ಮಂಜುನಾಥ ಭಂಡಾರಿ, ಐವಾನ್ ಡಿಸೋಜ, ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲ್, ಮಿಥುನ್ ರೈ, ದಿನೇಶ್ ಹೆಗ್ಡೆ ಮೊಳಹಳ್ಳಿ, ಸುಧೀರ್‌ಕುರ್ಮಾ ಮುರೋಳ್ಳಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ ಕೊಡವೂರು, ಎಂ.ಎ.ಗಫೂರ್, ಹರೀಶ್ ಕುಮಾರ್, ರಕ್ಷಿತ್ ಶಿವರಾಮ್, ಕಿಶನ್ ಹೆಗ್ಡೆ, ಕಿರಣ್ ಹೆಗ್ಡೆ, ರಮೇಶ್ ಕಾಂಚನ್, ಕೃಪಾ ಆಳ್ವ, ದೇವಿಪ್ರಸಾದ್ ಶೆಟ್ಟಿ ಬೆಳಪು, ಮುರಳಿ ಶೆಟ್ಟಿ, ಶುಭದ್ ರಾವ್ ಕಾರ್ಕಳ, ದಿನಕರ ಹೇರೂರು, ದೀಪಕ್ ಕೋಟ್ಯಾನ್, ಸೌರಭ್ ಬಲ್ಲಾಳ್ ಸೇರಿದಂತೆ ದೊಡ್ಡ ಸಂಖ್ಯೆ ಕಾರ್ಯಕರ್ತರು ಉಪಸ್ಥಿತರಿದ್ದರು.ಎಸ್‌ಐಟಿ ತನಿಖೆಗೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿಪರಶುರಾಮ ಕಂಚಿನ ಪ್ರತಿಮೆ ಹಾಗೂ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಆಗಿರುವ ಅವ್ಯವಹಾರ ಹಾಗೂ ನಕಲಿ ಪರಶುರಾಮ ಪ್ರತಿಮೆ ನಿರ್ಮಾಣದ ಪ್ರಕರಣವನ್ನು ವಿಶೇಷ ತನಿಖಾ ದಳ(ಎಸ್‌ಐಟಿ) ರಚಿಸಿ ತನಿಖೆ ಮಾಡಿಸಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದ ನಿಯೋಗ ವಿಧಾನಸೌಧದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಒತ್ತಾಯಿಸಿತು.ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಕಾಂಗ್ರೆಸ್ ಮುಖಂಡರ ನಿಯೋಗ ವಿಧಾನಸೌಧಕ್ಕೆ ತೆರಳಿ ಮನವಿ ಸಲ್ಲಿಸಲಾಯಿತು. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡರು ನಿಯೋಗದಲ್ಲಿದ್ದರು.