ಬೆಂಗಳೂರು:ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್‌ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿ ಕಾರಿದ್ದಾರೆ.
ಇದನ್ನೂ ಓದಿ:ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ, ಸುಭದ್ರ ಕೇಂದ್ರ ಬಜೆಟ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್
ಕೇಂದ್ರ ಬಜೆಟ್​ಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ಕೇಂದ್ರ ಸಂಪುಟದಲ್ಲಿ ರಾಜ್ಯದ ಐದು ಜನ‌ ಸಚಿವರಾಗಿದ್ದರೂ, ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ, ಈ‌ ಐದೂ ಮಂದಿ ರಾಜ್ಯಕ್ಕೆ ಅನುಕೂಲ ಮಾಡಿಸುವಲ್ಲಿ ವಿಫಲರಾಗಿದ್ದಾರೆ. ಈ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಚೊಂಬು ಕೊಟ್ಟಿದ್ದಾರೆ, ಕರ್ನಾಟಕಕ್ಕೆ ಪಂಗನಾಮ ಹಾಕಿದ್ದಾರೆ ಎಂದು ತೀಕ್ಷ್ಣವಾಗಿ ಟೀಕಿಸಿದರು.
ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ ಜನತೆಯ ಕೈಗೆ ಚೊಂಬು ಕೊಟ್ಟಿದ್ದಾರೆ. ಪ್ರಧಾನ ಮಂತ್ರಿಗಳು ತನ್ನ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ ಒದಗಿಸಿದ್ದು, ಇತರ ರಾಜ್ಯಗಳನ್ನು ಕಡೆಗಣಿಸಿದ್ದಾರೆ ಎಂದು ದೂರಿದರು.
ರೈತರಿಗೆ ಮೋಸ ಮಾಡಿದ್ದಾರೆ:ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ಒದಗಿಸುವುದಾಗಿ ಹಿಂದಿನ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮ್‌ ಅವರು ಘೋಷಿಸಿದ್ದರು. ಆದರೆ ಈ ಯೋಜನೆಗೆ ನಯಾ ಪೈಸೆ ಒದಗಿಸಿಲ್ಲ. ಈ ಆಯವ್ಯಯದಲ್ಲಿ ಒದಗಿಸುವಂತೆ ಕೋರಲಾಗಿತ್ತು. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈ ವರ್ಷ 5ಸಾವಿರ ಕೋಟಿ ರೂ. ಅನುದಾನ ಒದಗಿಸುತ್ತಿದೆ. ಆದರೆ ಇದಕ್ಕೆ ಪೂರಕವಾಗಿ ಹಿಂದುಳಿದ ತಾಲ್ಲೂಕುಗಳಿಗೆ ಅನುದಾನ ಒದಗಿಸುವಂತೆ ಮನವಿ ಮಾಡಲಾಗಿತ್ತು. ಇದೇ ರೀತಿ ಮಹಾದಾಯಿ ಯೋಜನೆ, ಮೇಕೆದಾಟು ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಕುರಿತು ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಮಾಡದೆ ರೈತರಿಗೆ ಮೋಸ ಮಾಡಿದ್ದಾರೆ.
15 ನೇ ಹಣಕಾಸು ಆಯೋಗದ ಶಿಫಾರಸಿನಂತೆ ಪೆರಿಫೆರಲ್‌ ರಸ್ತೆ ನಿರ್ಮಾಣ, ಕೆರೆಗಳ ಅಭಿವೃದ್ಧಿ, ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳಿಗೆ ಒಟ್ಟು 11,485 ಕೋಟಿ ರೂ. ಅನುದಾನವನ್ನು ನೀಡುವಂತೆ ಕೋರಲಾಗಿತ್ತು. ಜೊತೆಗೆ ಹಲವಾರು ವರ್ಷಗಳಿಂದ ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸುವಂತೆ ಬೇಡಿಕೆಯಿದ್ದು, ಬಜೆಟ್‌ ಪೂರ್ವಭಾವಿ ಸಭೆಯಲ್ಲಿಯೂ ಈ ಕುರಿತು ಬೇಡಿಕೆ ಸಲ್ಲಿಸಲಾಗಿತ್ತು. ಈ ಯಾವ ಮನವಿಗಳಿಗೂ ಕೇಂದ್ರ ಸರ್ಕಾರ ಮನ್ನಣೆ ನೀಡಿಲ್ಲ.
ಕೇಂದ್ರ ಬಜೆಟ್‌ ಜನವಿರೋಧಿ:ಈ ಹಿಂದಿನ ಬಜೆಟ್‌ನಲ್ಲಿ ರಾಜ್ಯಕ್ಕೆ ಘೋಷಿಸಿದ್ದ ಯೋಜನೆಗಳಿಗೇ ಕೇಂದ್ರ ಸರ್ಕಾರ ಇನ್ನೂ ಯಾವುದೇ ಅನುದಾನ ಒದಗಿಸಿಲ್ಲ. ಹೀಗಾಗಿ ಈ ಬಾರಿ ಕೈಗಾರಿಕಾ ಕಾರಿಡಾರ್ ಬಗ್ಗೆ ಪ್ರಸ್ತಾಪಿಸಿರುವುದು ಕೇವಲ ಘೋಷಣೆಯಾಗಿ ಮಾತ್ರ ಉಳಿಯಲಿದೆ. ಈ ಬಜೆಟ್‌ ಜನವಿರೋಧಿಯಾಗಿದ್ದು, ವಿಶೇಷವಾಗಿ ಬಡವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ವಾಗ್ದಾಳಿ ನಡೆಸಿದರು.
ರೈತರಿಗೆ ಪಂಗನಾಮ ಹಾಕಿದೆ:ಈ ಬಜೆಟ್ ನಲ್ಲಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ರೈತರು 5 ವರ್ಷಗಳಿಂದ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ರಚಿಸಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಬಜೆಟ್ ನಲ್ಲಿ ಚಕಾರವನ್ನೇ ಎತ್ತಿಲ್ಲ. ಸ್ವಾಮಿನಾಥನ್‌ ಆಯೋಗದ ಶಿಫಾರಸ್ಸುಗಳ ಜಾರಿ ಬಗ್ಗೆಯೂ ಯಾವುದೇ ಮಾತು ಆಡದೆ ರೈತರಿಗೆ ಪಂಗನಾಮ ಹಾಕಿದೆ.  ಆರೋಗ್ಯ, ರಕ್ಷಣೆ, ಆರೋಗ್ಯ, ಐಟಿ ಮತ್ತು ಸಂವಹನ ಕ್ಷೇತ್ರಗಳಿಗೆ ಕಳೆದ ಫೆಬ್ರವರಿಯಲ್ಲಿ ಮಂಡಿಸಲಾಗಿದ್ದ ಮಧ್ಯಂತರ ಬಜೆಟ್‌ನಲ್ಲಿ ಘೋಷಿಸಿದ್ದ ಅನುದಾನವನ್ನು ಈಗ ಕಡಿತಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿಗೆ ಅನುದಾನದಲ್ಲೂ ಗಣನೀಯವಾಗಿ ಕಡಿತಗೊಳಿಸಿರುವುದು ಈ ಸಮುದಾಯಗಳಿಗೆ ಎಸಗಿರುವ ದ್ರೋಹವಾಗಿದೆ ಎಂದರು.
ಆಗಸ್ಟ್‌ 28 ರಂದು ರಾಜ್ಯಕ್ಕೆ 16ನೇ ಹಣಕಾಸು ಆಯೋಗ ಭೇಟಿ:ಕೇಂದ್ರದ 16 ನೇ ಹಣಕಾಸು ಆಯೋಗವು ಆಗಸ್ಟ್‌ 28 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಹಿಂದಿನ ಬಾರಿ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಮನವಿ ಮಾಡಲಾಗುವುದು. ಈ ಕುರಿತು ಸಮರ್ಥವಾಗಿ ವಿಷಯ ಮಂಡಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ಅಗ್ರ 10 ದೇಶಗಳ ಪೈಕಿ ಭಾರತ ಯಾವ ಸ್ಥಾನ ಪಡೆದಿದೆ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
