ಅವಿನಾಶ್ ಜೈನಹಳ್ಳಿಮೈಸೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ಅದೃಷ್ಟದ ನೆಲೆ’ ಎಂದೇ ಹೇಳಲಾಗುವ ವರುಣ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯ ಕಣ ರಂಗೇರುತ್ತಿದೆ. ಅಂತಿಮ ಕ್ಷಣದಲ್ಲಿ ಸಿದ್ದರಾಮಯ್ಯ ಅವರೇ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ಚರ್ಚೆ ಜೋರಾಗಿದೆ.
ಮೈಸೂರು, ನಂಜನಗೂಡು ಹಾಗೂ ತಿ.ನರಸೀಪುರ ತಾಲೂಕಿನ ಹಲವು ಗ್ರಾಮಗಳನ್ನು ಒಳಗೊಂಡು 2008ರಲ್ಲಿ ಜನ್ಮ ತಾಳಿದ ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಎರಡು ಬಾರಿ ಗೆದ್ದಿದ್ದಾರೆ. 2008ರಲ್ಲಿ ಮೊದಲ ಬಾರಿಗೆ ಗೆದ್ದಾಗ ಪ್ರತಿಪಕ್ಷದ ನಾಯಕರಾದರೆ, 2013ರಲ್ಲಿ ಎರಡನೇ ಬಾರಿ ಜಯಗಳಿಸಿ ಮುಖ್ಯಮಂತ್ರಿಯಾಗಿದ್ದರು. ಈ ಕಾರಣಕ್ಕೆ ಇದು ಅವರ ಅದೃಷ್ಟದ ಕ್ಷೇತ್ರವಾಗಿದೆ. ಅಲ್ಲದೆ, ಸಿದ್ದರಾಮಯ್ಯ ಅವರ ಹುಟ್ಟೂರು ಸಿದ್ದರಾಮನಹುಂಡಿ ಇದೇ ಕ್ಷೇತ್ರಕ್ಕೆ ಸೇರಿರುವುದು ವಿಶೇಷ. 2018ರಲ್ಲಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗೆಲುವು ಸಾಧಿಸಿ ಸದ್ಯ ಶಾಸಕರಾಗಿದ್ದಾರೆ.
‘2023ರ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ’ ಎಂದು ಸ್ವತಃ ಸಿದ್ದರಾಮಯ್ಯ ಅವರೇ ಘೊಷಣೆ ಮಾಡಿದ್ದಾರೆ. ಆದರೆ ವರುಣ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಾಸಕ ಡಾ.ಯತೀಂದ್ರ ಕೂಡ, ‘ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರಷ್ಟೇ, ಆದರೆ ಅದೇ ಅಂತಿಮವಲ್ಲ. ವರುಣದಿಂದಲೇ ಸ್ಪರ್ಧಿಸುವಂತೆ ನಾವು ಒತ್ತಾಯ ಮಾಡಿದ್ದೇವೆ’ ಎಂದು ಹೇಳುತ್ತಿದ್ದಾರೆ. ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಸಿದ್ದರಾಮಯ್ಯ ಅಂತಿಮ ಕ್ಷಣದಲ್ಲಿ ವರುಣ ಕ್ಷೇತ್ರದಿಂದಲೂ ಸ್ಪರ್ಧಿಸುವ ಸಾಧ್ಯತೆ ಹೆಚ್ಚಾಗಿದೆ. ಇನ್ನು ಬಿಜೆಪಿ ಟಿಕೆಟ್​ಗಾಗಿ ಅನೇಕ ಆಕಾಂಕ್ಷಿಗಳು ಪ್ರಯತ್ನಿಸುತ್ತಿದ್ದಾರೆ. ಜೆಡಿಎಸ್​ನಿಂದ 2018ರ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದ ನಿವೃತ್ತ ಪ್ರಾಧ್ಯಾಪಕ ಬೊಕ್ಕಹಳ್ಳಿ ಸುಬ್ಬಪ್ಪ ಅವರ ಪುತ್ರ ಅಭಿಷೇಕ್ ಅವರಿಗೆ ಪಕ್ಷ ಈಗಾಗಲೆ ಟಿಕೆಟ್ ಘೊಷಣೆ ಮಾಡಿದೆ.
ಸಿದ್ದರಾಮಯ್ಯ ಸ್ಪರ್ಧಿಸುವಂತೆ ಒತ್ತಾಯ: ಸಿದ್ದರಾಮಯ್ಯ ವರುಣದಿಂದಲೇ ಸ್ಪರ್ಧಿಸಬೇಕು ಎಂಬ ಒತ್ತಾಯ ಕ್ಷೇತ್ರದಲ್ಲಿ ಮಾತ್ರವಲ್ಲದೆ, ಜಿಲ್ಲೆಯ ಕಾಂಗ್ರೆಸ್ ಮುಖಂಡರಿಂದಲೂ ಹೆಚ್ಚಾಗಿದೆ. ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಘೊಷಿಸಿದ ಬಳಿಕ ಎಲ್ಲೆಡೆ ಸೋಲು, ಗೆಲುವಿನ ಲೆಕ್ಕಾಚಾರ ಜೋರಾಗಿ ನಡೆಯುತ್ತಿದೆ.
ಒಳೇಟು ಬೀಳುವ ಸಾಧ್ಯತೆ: ಕೋಲಾರದ ಕಾಂಗ್ರೆಸ್​ನಲ್ಲಿ ಗುಂಪುಗಾರಿಕೆ, ಒಳೇಟು ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ವಿರೋಧಿಗಳು ಸಿದ್ದರಾಮಯ್ಯ ವಿರುದ್ಧ ಈಗಾಗಲೆ ಅಪಪ್ರಚಾರ ಪ್ರಾರಂಭಿಸಿದ್ದು, ಕೋಲಾರ ಕ್ಷೇತ್ರವೂ ಅವರಿಗೆ ಸೇಫ್ ಅಲ್ಲ ಎಂಬ ಅಭಿಪ್ರಾಯ ಎಲ್ಲೆಡೆ ವ್ಯಕ್ತವಾಗುತ್ತಿದೆ. ಈ ನಡುವೆ, ಮೈಸೂರು ಜಿಲ್ಲೆಯ ಅಭಿಮಾನಿಗಳು ತವರು ಕ್ಷೇತ್ರ ವರುಣದಿಂದಲೇ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ರಾಜಕೀಯ ಲೆಕ್ಕಾಚಾರಗಳನ್ನು ಗಮನಿಸುತ್ತಿರುವ ಸಿದ್ದರಾಮಯ್ಯ ಕೂಡ ಅಂತಿಮ ಕ್ಷಣದಲ್ಲಿ ವರುಣದಿಂದಲೇ ಸ್ಪರ್ಧಿಸಲು ಮನಸ್ಸು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಲ್ಲದೆ, ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಸೋಲಿನಿಂದ ಮುಜುಗರ ಅನುಭವಿಸಿರುವ ಕಾರಣ ವರುಣದಿಂದ ಸ್ಪರ್ಧಿಸಿ ಗೆಲ್ಲುವ ಮೂಲಕ ವಿರೋಧಿಗಳಿಗೆ ತಕ್ಕ ಉತ್ತರ ನೀಡಬೇಕು ಎನ್ನುವುದು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯವಾಗಿದೆ. ಪಕ್ಷದ ವರಿಷ್ಠರು ಒಪ್ಪಿದರೆ ಕೋಲಾರ ಮತ್ತು ವರುಣ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸುವ ಸಾಧ್ಯತೆಯೂ ಇದೆ.
ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ಮಾತ್ರ ಯತೀಂದ್ರ ಸಿದ್ದರಾಮಯ್ಯ ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ. ಆದರೆ, ಯತೀಂದ್ರ ಅವರನ್ನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಳುಹಿಸಿ, ಸಿದ್ದರಾಮಯ್ಯ ಅವರೇ ವರುಣ ಅಭ್ಯರ್ಥಿಯಾಗಬೇಕು ಎನ್ನುವುದು ಸ್ಥಳೀಯ ಕಾಂಗ್ರೆಸ್ ನಾಯಕರ ಒತ್ತಾಯವಾಗಿದೆ.
ವರಿಷ್ಠರು ಬಯಸಿದರೆ ವಿಜಯೇಂದ್ರ ಸ್ಪರ್ಧೆ!: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ವರುಣ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲವಾಗಿದೆ. ಆದರೆ, ವಿಜಯೇಂದ್ರ ಇಲ್ಲಿಂದಲೇ ಸ್ಪರ್ಧಿಸಬೇಕು ಎಂಬ ಆಸೆ ಸ್ಥಳೀಯ ಕಾರ್ಯಕರ್ತರಲ್ಲಿದ್ದರೂ ಅವರು ಸ್ಪರ್ಧೆ ಮಾಡುವಂತಹ ಬೆಳವಣಿಗೆಗಳು ಕ್ಷೇತ್ರದಲ್ಲಿ ಗೋಚರವಾಗಿಲ್ಲ. ಆದರೆ, ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಯಡಿಯೂರಪ್ಪ ಹೇಳುವ ಮೂಲಕ ವರುಣದಿಂದ ಸ್ಪರ್ಧಿಸುವ ಸಾಧ್ಯತೆಗಳ ಚರ್ಚೆಯನ್ನು ಕ್ಷೀಣವಾಗಿಸಿದ್ದಾರೆ. ಇತ್ತೀಚೆಗಷ್ಟೇ ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆ, ವರುಣ ಕ್ಷೇತ್ರ ಹಾಗೂ ಕಾರ್ಯಕರ್ತರ ಜತೆಗಿನ ತಮ್ಮ ಸಂಬಂಧದ ಬಗ್ಗೆ ವಿಜಯೇಂದ್ರ ಹೇಳಿಕೊಂಡಿದ್ದಾರೆ. ವರಿಷ್ಠರು ಬಯಸಿದರೆ ವರುಣದಿಂದ ಚುನಾವಣೆಗೆ ನಿಲ್ಲುವುದಾಗಿಯೂ ತಿಳಿಸಿದ್ದಾರೆ.
ಬಿಜೆಪಿಯಲ್ಲಿದ್ದಾರೆ ಅಪಾರ ಆಕಾಂಕ್ಷಿಗಳು: ಬಿ.ವೈ.ವಿಜಯೇಂದ್ರ ಆಪ್ತ, ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರು ಮೈಸೂರು ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾಗಿ ಪಕ್ಷ ಕಟ್ಟುವ ಕೆಲಸ ಮಾಡಿದ್ದಾರೆ. ಇವರಲ್ಲದೆ, 2013ರಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದ ಯಡಿಯೂರಪ್ಪ ಆಪ್ತ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪು.ಸಿದ್ದಲಿಂಗಸ್ವಾಮಿ ಈ ಬಾರಿಯೂ ಟಿಕೆಟ್​ಗೆ ಪ್ರಯತ್ನಿಸುತ್ತಿದ್ದಾರೆ.
ಇನ್ನು ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಾಗಿದ್ದ ಹಾಗೂ 3ನೇ ಬಾರಿಗೆ ಜಿಲ್ಲಾ ಗ್ರಾಮಾಂತರ ಘಟಕದ ಪ್ರಧಾನ ಕಾರ್ಯರ್ದಯಾಗಿರá-ವ ಪ್ರತಾಪ್ ಜಿ.ದೇವನೂರು ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಇವರು ಆರ್​ಎಸ್​ಎಸ್ ಮತ್ತು ಎಬಿವಿಪಿ ಸಂಘಟನೆಯಲ್ಲಿ ಗುರá-ತಿಸಿಕೊಂಡಿದ್ದಾರೆ. ಮೈಸೂರು ಜಿಲ್ಲಾ ಸಹಕಾರ ಯೂನಿಯನ್, ಎಂಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ, ಮೈಮá-ಲ್ ನಿರ್ದೇಶಕರಾಗಿ ಕಾರ್ಯನಿರ್ವಹಿಸá-ತ್ತಿರá-ವ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಎನ್.ಸದಾನಂದ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಲ್ಲರಾಜಯ್ಯನಹುಂಡಿ ಗುರುಸ್ವಾಮಿ, ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಆಕಾಂಕ್ಷಿಗಳಾಗಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ಕೆ.ಎನ್.ಪುಟ್ಟಬುದ್ಧಿ ಅವರ ಪುತ್ರ ಶರತ್ ಪುಟ್ಟಬುದ್ಧಿ ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಕಾಂಗ್ರೆಸ್ ಪ್ಲಸ್-ಮೈನಸ್
+ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮಬಲ+ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕೈಗೊಂಡ ಅಭಿವೃದ್ಧಿ ಕೆಲಸಗಳು+ ಲಿಂಗಾಯತ ಮತದಾರರಷ್ಟೇ ಹಿಂದುಳಿದ ಹಾಗೂ ದಲಿತ ವರ್ಗಗಳ ಮತದಾರರು ಇರುವುದು– ಸಂಸದ ವಿ.ಶ್ರೀನಿವಾಸಪ್ರಸಾದ್ ಪ್ರತಿಷ್ಠೆಯಾಗಿ ಪರಿಗಣಿಸಿರುವುದು– ಶಾಸಕ ಡಾ.ಯತೀಂದ್ರ ಹೆಚ್ಚಿನ ಅನುದಾನ ತರುವಲ್ಲಿ ವಿಫಲವಾಗಿದ್ದಾರೆಂಬ ಮಾತುಗಳು– ರಾಜ್ಯ ಮಟ್ಟದ ನಾಯಕರಿಂದಲೇ ಒಳೇಟು ಭೀತಿ
ಬಿಜೆಪಿ ಪ್ಲಸ್-ಮೈನಸ್+ ದೊಡ್ಡ ಸಂಖ್ಯೆಯಲ್ಲಿರುವ ಲಿಂಗಾಯತ ಮತದಾರರು+ ಬಿ.ಎಸ್.ಯಡಿಯೂರಪ್ಪ ಮತ್ತು
ಬಿ.ವೈ.ವಿಜಯೇಂದ್ರ ನಾಮಬಲ+ ಲಿಂಗಾಯತರಿಗೆ ಟಿಕೆಟ್ ನೀಡಲು ಮುಂದಾಗಿರುವುದು– ಆಕಾಂಕ್ಷಿಗಳ ಸಂಖ್ಯೆ ಅಧಿಕ– ಟಿಕೆಟ್ ಸಿಗದವರಿಂದ ಒಳೇಟಿನ ಆತಂಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
