ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳ ಚುನಾಯಿತ ಸದಸ್ಯರ ಅವಧಿ ಪೂರ್ಣಗೊಂಡು ಕಳೆದ ತಿಂಗಳ 27ಕ್ಕೆ ಮೂರು ವರ್ಷವಾಗಿದೆ. ಚುನಾವಣೆಯನ್ನು ಸದ್ಯದಲ್ಲೇ ನಡೆಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್​ನಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಹೇಳುತ್ತಲೇ ಬಂದಿದೆ. ಆದರೆ ಅದಕ್ಕೆ ಅಗತ್ಯವಿರುವ ಮೀಸಲಾತಿ ನಿಗದಿ ಮತ್ತು ಕ್ಷೇತ್ರ ಪುನರ್ವಿಂಗಡಣೆಯನ್ನು ಮಾಡದೇ ಇರುವುದರಿಂದ ಚುನಾವಣೆಯನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಈ ವಿಷಯದಲ್ಲಿ ಚುನಾವಣಾ ಆಯೋಗ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ, ಜಿಪಂ, ತಾಪಂ ಸದಸ್ಯರ ಅವಧಿ ಪೂರ್ಣಗೊಳ್ಳುವ ಮೊದಲೇ 2021ರ ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಿತ್ತು. ಆದರೆ ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ಕ್ಷೇತ್ರಗಳ ವ್ಯಾಪ್ತಿ ಮತ್ತು ಮೀಸಲಾತಿ ನಿರ್ಧಾರದ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದು, ಆಯೋಗವೊಂದನ್ನು ರಚಿಸಿ, ಅದಕ್ಕೆ ನೀಡಿತ್ತು. ಈ ತೀರ್ವನವನ್ನು ಪ್ರಶ್ನಿಸಿ ಆಯೋಗ ಹೈಕೋರ್ಟ್ ಮೆಟ್ಟಿಲೇರಿತ್ತು.
ಅದಾಗಿ ಎರಡು ವರ್ಷಗಳ ಬಳಿಕ, ಕಳೆದ ವರ್ಷ ಡಿಸೆಂಬರ್​ನಲ್ಲಿ ಹೈಕೋರ್ಟ್ ವಿಚಾರಣೆ ಸಂದರ್ಭದಲ್ಲಿ ರಾಜ್ಯ ಸರ್ಕಾರ, ‘ಜನವರಿಯೊಳಗೆ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ಕಾರ್ಯ ಪೂರ್ಣಗೊಳಿಸಲಾಗುವುದು’ ಎಂದು ಅಫಿಡವಿಟ್ ಸಲ್ಲಿಸಿತ್ತು. ಆ ಭರವಸೆ ಈವರೆಗೂ ಈಡೇರಿಲ್ಲ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ತಾನು ನೀಡಿದ ತೀರ್ಪನ್ನು ಪಾಲಿಸದೇ ಇದ್ದುದಕ್ಕಾಗಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡವನ್ನೂ ವಿಧಿಸಿತ್ತು. ಅದನ್ನು ಪಾವತಿಸಿದ ರಾಜ್ಯ ಸರ್ಕಾರ, ‘ಏ. 1ರೊಳಗೆ ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗುವುದು, ಮುಂದಿನ ಕ್ರಮಕ್ಕಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ಕಳಿಸಲಾಗುವುದು’ ಎಂದು ವಾಗ್ದಾನ ಮಾಡಿತ್ತು. ಕ್ಷೇತ್ರಗಳ ಪುನರ್​ವಿಂಗಡಣೆ ಹಾಗೂ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಲು ರಾಜ್ಯ ಸರ್ಕಾರ ಹಿಂದೆಯೇ ಒಂದು ಆಯೋಗವನ್ನು ರಚನೆ ಮಾಡಿತ್ತು.
ಅದು ತನ್ನ ವರದಿಯಲ್ಲಿ ನೀಡಿದ್ದ ಶಿಫಾರಸುಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಂಗೀಕರಿಸಿತ್ತು. ಈ ಸಂಬಂಧ ಡಿಸೆಂಬರ್​ನಲ್ಲೇ ಅಧಿಸೂಚನೆ ಕೂಡ ಹೊರಡಿಸಿತ್ತು. ಆದರೆ, ಕ್ಷೇತ್ರವಾರು ಮೀಸಲಾತಿ ನಿಗದಿ ಮಾಡದೇ ಇರುವುದರಿಂದ ಸಮಸ್ಯೆ ಉದ್ಭವಿಸಿದೆ. ಇದೇ ರೀತಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಕೂಡ ರಾಜ್ಯ ಸರ್ಕಾರ ಸಕಾಲದಲ್ಲಿ ನಡೆಸದೇ ವಿಳಂಬ ತಂತ್ರ ಅನುಸರಿಸುತ್ತಿದೆ. ಬಿಬಿಎಂಪಿಯ ಚುನಾಯಿತ ಸದಸ್ಯರ ಅವಧಿ 2020ರ ಸೆಪ್ಟೆಂಬರ್​ನಲ್ಲೇ ಕೊನೆಗೊಂಡಿದೆ. ಪ್ರಜಾಪ್ರಭುತ್ವದಲ್ಲಿ ವಿಧಾನಸಭೆಗೆ ಎಷ್ಟು ಮಹತ್ವವಿದೆಯೋ ಅಷ್ಟೇ ಮಹತ್ವವನ್ನು ಸ್ಥಳೀಯ ಸಂಸ್ಥೆಗಳಿಗೂ ನೀಡಲಾಗಿದೆ. ಸಾರ್ವಜನಿಕರ ದೈನಂದಿನ ಸಮಸ್ಯೆಗಳ ಬಗ್ಗೆ ನಿಗಾ ಇಡುವ, ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈ ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಜನಪ್ರತಿನಿಧಿಗಳು ಇರುವುದು ಅತ್ಯವಶ್ಯ. ಸರ್ಕಾರ ಇನ್ನು ಯಾವ ಕಾರಣಕ್ಕೂ ವಿಳಂಬ ಮಾಡದೇ, ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮುಗಿದ ತಕ್ಷಣವೇ ಜಿಪಂ, ತಾಪಂ ಮತ್ತು ಬಿಬಿಎಂಪಿ ಚುನಾವಣೆ ನಡೆಸಲು ಮುಂದಾಗಬೇಕು.
ಧ್ರುವ ಸರ್ಜಾ ಪ್ಯಾನ್ ಇಂಡಿಯಾ ‘ಮಾರ್ಟಿನ್’ ಬಿಡುಗಡೆ ದಿನಾಂಕ ಘೋಷಣೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
