ಬೆಂಗಳೂರು:ವಿವಿಧ ಬೇಡಿಕೆ ಮುಂದಿಟ್ಟು ಮುಷ್ಕರ ಹೂಡಿದ್ದ ಅತಿಥಿ ಉಪನ್ಯಾಸಕರು ಮುಖ್ಯಮಂತ್ರಿಯವರು ನೀಡಿದ ಭರವಸೆಗೆ ಒಪ್ಪಿ, ತಮ್ಮ ನಿರ್ಧಾರದಿಂದ ಹಿಂದೆ ಸರಿದು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ.ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5 ಸಾವಿರ ರೂ.ಗಳಿಂದ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮತ್ತು ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಲು ಸಮ್ಮತಿ ನೀಡಿದ ಮುಖ್ಯಮಂತ್ರಿಗಳು ಅತಿಥಿ ಉಪನ್ಯಾಸಕರು ಕೂಡಲೇ ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಶನಿವಾರ ನಡೆದ ಸಭೆಯಲ್ಲಿ ಮನವಿ ಮಾಡಿದ್ದರು.ಮುಷ್ಕರ ನಿರತ ಅತಿಥಿ ಉಪನ್ಯಾಸಕರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸಿಎಂ, ಅವರ ಬೇಡಿಕೆಗಳ ಕುರಿತು ಚರ್ಚಿಸಿದರು. ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ ಎಂಬುದನ್ನೂ ಇದೇ ವೇಳೆ ಸ್ಪಷ್ಟಪಡಿಸಿದರು.ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡ ಸಿಎಂ, ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಎಂದು ತಿಳಿಸಿದರು.ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ.ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ಸ್ಪಷ್ಟಪಡಿಸಿದರು.ಇದರೊಂದಿಗೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಟು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲು ಮುಖ್ಯಮಂತ್ರಿಯವರು ಇದೇವೇಳೆ ಒಪ್ಪಿಗೆ ಸೂಚಿಸಿದರು.ಇದರೊಂದಿಗೆ ನೇಮಕಾತಿಯಲ್ಲಿ ಅವರ ಸೇವಾನುಭವ ಆಧರಿಸಿ, ವೈಟೇಜ್ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ, ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್ ಪ್ರಕ್ರಿಯೆ ಸರಳೀಕರಣಗೊಳಿಸಲು ಸಹ ಸಮ್ಮತಿಸಿದರು.ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಎಂ.ಎಸ್. ಶ್ರೀಕರ್, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಿ. ಜಗದೀಶ್ ಮತ್ತು ಇತರ ಹಿರಿಯ ಅಧಿಕಾರಿಗಳು, ಅತಿಥಿ ಉಪನ್ಯಾಸಕರ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಮುಷ್ಕರ ನಿರತರು, ನಮ್ಮ ಬೇಡಿಕೆ ಈಡೇರಿಸಲು ಭಾಗಶಃ ಭರವಸೆ ಸಿಕ್ಕಿದೆ. ಹೀಗಾಗಿ ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇವೆ ಎಂದು ಖಚಿತಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − three =
Remember me
