ಬೆಂಗಳೂರು:ಮುಂಗಾರು ಆರ್ಭಟ ತೀವ್ರಗೊಂಡಿದ್ದು, ನಿರಂತರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜು.8ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂ.8 ಮತ್ತು 9ರಂದು ಎಲ್ಲ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮುಂದಿನ 24 ಗಂಟೆ ಆರೆಂಜ್ ಅಲರ್ಟ್ ಇದ್ದರೆ, ಜು.9ರಿಂದ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಇರಲಿದೆ. ಬೆಳಗಾವಿ, ಕಲಬುರಗಿ ಮತ್ತು ಬೀದರ್​ನಲ್ಲಿ ಮುಂದಿನ 72 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುರುವಾರ ಉತ್ತರ ಕನ್ನಡದ ಕ್ಯಾಸಲ್ ರಾಕ್​ನಲ್ಲಿ ಬರೋಬ್ಬರಿ 25 ಸೆಂಮೀ. ದಾಖಲೆ ಮಳೆ ಬಿದ್ದಿದೆ. ಬಹುತೇಕ ಜಿಲ್ಲೆಗಳಲ್ಲಿ ನಿರಂತರ ಜಡಿಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಮಲೆನಾಡ ವಾತಾವರಣ ಸೃಷ್ಟಿಯಾಗಿದೆ.
ವಾಡಿಕೆಗಿಂತ ಅಧಿಕ ಮಳೆ:ಜೂನ್​ನಲ್ಲಿ ಮಳೆ ಕೊರತೆ ಎದುರಿಸಿದ್ದ ರಾಜ್ಯದಲ್ಲಿ ಜುಲೈನಲ್ಲಿ ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ. ರಾಜ್ಯಾದ್ಯಂತ ಜು.1ರಿಂದ ಜು.7ರವರೆಗೆ ವಾಡಿಕೆಯಂತೆ 58 ಮಿಮೀ ಮಳೆ ಆಗಬೇಕಿತ್ತು. ಆದರೆ, 112 ಮಿಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.94 ಹೆಚ್ಚು ಮಳೆಯಾಗಿದೆ.
ಬಾಧಿತ ಜಿಲ್ಲೆಗೆ ತೆರಳಲು ಸೂಚನೆ:ಅತಿವೃಷ್ಟಿ ಬಾಧಿತ ಜಿಲ್ಲೆಗಳಿಗೆ ತೆರಳಿ ಪರಿಸ್ಥಿತಿಯನ್ನು ನಿಭಾಯಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆಗಳನ್ನು ನಡೆಸುವ ಮೂಲಕ ಆಗಿರುವ ಅನಾಹುತಕ್ಕೆ ತಕ್ಷಣ ಪರಿಹಾರೋಪಾಯ ಕ್ರಮ ಕೈಗೊಳ್ಳಬೇಕು. ಅನಾಹುತಗಳಾಗುವ ಸಂಭವವಿದ್ದಲ್ಲಿ ಕೂಡಲೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ. ಅಲ್ಲದೆ ಶುಕ್ರವಾರ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಇತರ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.
ಭೂ ಕುಸಿತದಿಂದ ಆತಂಕ:ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಿರಂತರ ಮಳೆಯಿಂದ ಬಹುತೇಕ ನದಿಗಳು ತುಂಬಿ ಹರಿಯುತ್ತಿದ್ದು, ಬಂಟ್ವಾಳದಲ್ಲಿ ನೇತ್ರಾವತಿ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು ಭಾಗದಲ್ಲಿ ಸೌಪರ್ಣಿಕಾ, ಚಕ್ರ, ವಾರಾಹಿ, ಕುಬ್ಜಾ ಸಹಿತ ಎಲ್ಲ ನದಿಗಳು ಉಕ್ಕಿ ಹರಿಯುತ್ತಿವೆ. ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ಈ ಭಾಗದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ದೋಣಿಗಳಲ್ಲಿ ಸ್ಥಳಾಂತರಿಸಲಾಗುತ್ತಿದೆ. ಎನ್​ಡಿಆರ್​ಎಫ್, ಎಸ್​ಡಿಆರ್​ಎಫ್, ಗೃಹರಕ್ಷಕ ದಳ, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಬ್ಜಾ ನದಿ ನೀರು ನುಗ್ಗಿದ್ದು, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಎರಡನೇ ಬಾರಿ ನೆರೆ ನೀರು ನುಗ್ಗಿದೆ. ಹಲವಾರು ಕಡೆ ಧರೆ, ಆವರಣ ಗೋಡೆ, ಮನೆಯ ಗೋಡೆಗಳು ಕುಸಿದಿವೆ. ಮಂಗಳೂರು ವಿಮಾನ ನಿಲ್ದಾಣ ಸಮೀಪ ಆದ್ಯಪಾಡಿ-ಮರವೂರು ಸ್ಥಳೀಯ ರಸ್ತೆ ಕುಸಿದಿದೆ. ಮಂಗಳೂರಿನ ಕಣ್ಣೂರು ಬಳಿ ಗುಡ್ಡ ಕುಸಿದು ಐದು ಮನೆಗಳು ಅಪಾಯಕ್ಕೆ ಸಿಲುಕಿದ್ದು, ಮನೆಯವರನ್ನು ಸ್ಥಳಾಂತರಿಸಲಾಗಿದೆ.
ಡ್ಯಾಂಗಳಿಗೆ ನೀರು:ಮಲೆನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ 56,638 ಕ್ಯೂಸೆಕ್ ನೀರು ಬರುತ್ತಿದೆ. ತುಂಗಾ ಜಲಾಶಯ ಭರ್ತಿಯಾಗಿದ್ದು, ಹೊಸಪೇಟೆ ತುಂಗಭದ್ರಾ ಜಲಾಶಯಕ್ಕೆ ನೀರು ಹರಿಸಲಾಗುತ್ತಿದೆ. ಕೊಡಗು ಜೋರು ಮಳೆಯಿಂದ ಅಲ್ಲಲ್ಲಿ ಭೂಕುಸಿತವಾಗಿದ್ದು, ಕೆಲಕಾಲ ಸಂಚಾರಕ್ಕೆ ಅಡಚಣೆಯಾಗಿತ್ತು. ಹಾರಂಗಿ ಜಲಾಶಯಕ್ಕೆ 13,974 ಕ್ಯುಸೆಕ್ ನೀರು ಹರಿದು ಬರುತ್ತಿದೆ. ನದಿಗೆ 15,580 ಕ್ಯುಸೆಕ್, ನಾಲೆಗೆ 20 ಕ್ಯುಸೆಕ್ ನೀರು ಹರಿಯ ಬಿಡಲಾಗುತ್ತಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಗಡಿಭಾಗ ವಯನಾಡಿನಲ್ಲಿ ಅಧಿಕ ಮಳೆ ಬೀಳುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ 19,000 ಕ್ಯೂಸೆಕ್​ಗೂ ಹೆಚ್ಚು ನೀರು ಹರಿದು ಬರುತ್ತಿದ್ದು, ಜಲಾಶಯ ಭರ್ತಿಯಾಗಲು 7 ಅಡಿ ಮಾತ್ರ ಬಾಕಿ ಇದೆ.
ಮೃತರ ಸಂಖ್ಯೆ 3ಕ್ಕೇರಿಕೆ:ಬಂಟ್ವಾಳದ ಪಂಜಿಕಲ್ಲು ಬಳಿ ಬುಧವಾರ ರಾತ್ರಿ ಮನೆ ಮೇಲೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ್ದ ನಾಲ್ವರ ಪೈಕಿ ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಬ್ಬರ್ ಟ್ಯಾಪಿಂಗ್​ಗಾಗಿ ಕೇರಳದಿಂದ ಆಗಮಿಸಿದ್ದ ನಾಲ್ವರು ಈ ಹಳೇ ಮನೆಯಲ್ಲಿ ಉಳಿದುಕೊಂಡಿದ್ದರು.
ಎರಡು ಸೇತುವೆ ಜಲಾವೃತ:ಮೂರ್ನಾಲ್ಕು ದಿನಗಳಿಂದ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ವೇದಗಂಗಾ ಹಾಗೂ ದೂಧಗಂಗಾ ನದಿಗಳು ಮೈದುಂಬಿ ಹರಿಯುತ್ತಿವೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಭೋಜ-ಕಾರದಗಾ ಹಾಗೂ ಭೋಜ-ಕುನ್ನೂರ ಸೇತುವೆಗಳು ಜಲಾವೃತಗೊಂಡಿರುವ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸುರಿಯುತ್ತಲೇ ಇದ್ದು, ಹಲವು ಕಡೆಗಳಲ್ಲಿ ತೋಟ, ಗದ್ದ, ಮನೆಗಳಿಗೆ ನೀರು ನುಗ್ಗಿದೆ. ಹೊನ್ನಾವರ, ಕಾರವಾರ, ಕುಮಟಾದಲ್ಲಿ ತಲಾ ಒಂದು ಕಾಳಜಿ ಕೇಂದ್ರ ತೆರೆದು ಒಟ್ಟು 33 ಜನರನ್ನು ಅಲ್ಲಿಗೆ ಸ್ಥಳಾಂತರಿಸಲಾಗಿದೆ. ಕಾರವಾರ-ಜೊಯಿಡಾ ರಾಜ್ಯ ಹೆದ್ದಾರಿ 34ರ ಅಣಶಿ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಿಂದ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ರಾತ್ರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 3 =
Remember me
