ಬೆಂಗಳೂರು:ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ಮರುವಿಂಗಡಣೆ ಹಾಗೂ ಇತರ ಹಿಂದುಳಿದ ವರ್ಗಗಳೂ (ಒಬಿಸಿ) ಸೇರಿ ಎಲ್ಲ ವರ್ಗಗಳಿಗೂ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರಕ್ಕೆ ಹೈಕೋರ್ಟ್ 3 ತಿಂಗಳ ಗಡುವು ನೀಡಿದೆ. ಜತೆಗೆ, ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಂಡ ನಂತರದ ಒಂದು ವಾರದ ಬಳಿಕ ಚುನಾವಣಾ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನ್ಯಾಯಾಲಯ ನಿರ್ದೇಶಿಸಿದೆ.
ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ಹಿಂಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆಗೆ ತಿದ್ದುಪಡಿ ತಂದಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಹಾಗೂ ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರಿದ್ದ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಹಾಗೂ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರ ವಾದ-ಪ್ರತಿವಾದ ಆಲಿಸಿದ ಪೀಠ, 12 ವಾರಗಳ ಒಳಗೆ ಸರ್ಕಾರ ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಬೇಕು. ಅದಾದ ಒಂದು ವಾರದೊಳಗೆ ಆಯೋಗ ಚುನಾವಣಾ ಪ್ರಕ್ರಿಯೆ ಆರಂಭಿಸಬೇಕು. ಸರ್ಕಾರ ಮತ್ತೆ ಯಾವುದೇ ಕಾರಣ ನೀಡಿ ಮತ್ತೆ ಸಮಯ ವಿಸ್ತರಣೆಗೆ ಕೋರುವಂತಿಲ್ಲ ಎಂದು ಸ್ಪಷ್ಟಪಡಿಸಿತು.
ಆಯೋಗ ರಚನೆ:ಅರ್ಜಿ ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಹಾಜರಾಗಿ, ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ 8 ವಾರಗಳಲ್ಲಿ ಕ್ಷೇತ್ರ ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ನಿರ್ದೇಶಿಸಿರುವ ಸುಪ್ರೀಂಕೋರ್ಟ್, ನಂತರದ ಒಂದು ವಾರದ ಬಳಿಕ ಚುನಾವಣೆ ಪ್ರಕ್ರಿಯೆ ಆರಂಭಿಸಲು ಆಯೋಗಕ್ಕೆ ನಿರ್ದೇಶಿಸಿದೆ. ಕ್ಷೇತ್ರ ಮರುವಿಂಗಡಣೆ ಮತ್ತು ಹಿಂದುಳಿದ ವರ್ಗಗಳೂ ಸೇರಿ ಎಲ್ಲ ವರ್ಗಗಳನ್ನು ಒಳಗೊಂಡ ಮೀಸಲಾತಿ ನಿರ್ಧರಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ಚುನಾವಣಾ ಆಯೋಗದ ನಿವೃತ್ತ ಆಯುಕ್ತರನ್ನು ಒಳಗೊಂಡ ಸಮಿತಿಯನ್ನು ಸರ್ಕಾರ ರಚಿಸಿದೆ. ಆದ್ದರಿಂದ, ಕ್ಷೇತ್ರ ವಿಂಗಡಣೆ ಮತ್ತು ಮೀಸಲಾತಿ ನಿಗದಿಪಡಿಸಲು 3 ತಿಂಗಳು ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಅದಕ್ಕೆ ಪ್ರತಿಕ್ರಿಯಿಸಿದ ಪೀಠ, ಬಿಬಿಎಂಪಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ 8 ವಾರ ಕಾಲಾವಕಾಶ ನೀಡಿದೆ. ಇಲ್ಲೇಕೆ ಹೆಚ್ಚು ಸಮಯ ಕೇಳುತ್ತಿದ್ದೀರಿ? ನಾವೂ ಸಹ 8 ವಾರ ಮಾತ್ರ ನೀಡುತ್ತೇವೆ. ಸುಪ್ರೀಂಕೋರ್ಟ್ ಆದೇಶದಂತೆ ಅದೇ ವೇಳಾಪಟ್ಟಿ ಪಾಲಿಸಿ. ಆಯೋಗಕ್ಕೆ ಹೆಚ್ಚಿನ ಮಾನವ ಸಂಪನ್ಮೂಲ ಕಲ್ಪಿಸಿ ಎಂದು ಮೌಖಿಕವಾಗಿ ಹೇಳಿತು.
ಎಜಿ ಪ್ರತಿಕ್ರಿಯಿಸಿ, ಬಿಬಿಎಂಪಿ ಚುನಾವಣೆ ಬೆಂಗಳೂರಿಗಷ್ಟೇ ಸೀಮಿತವಾಗಿದೆ. ಆದರೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ವ್ಯಾಪ್ತಿ ದೊಡ್ಡದಿದ್ದು, ಇಡೀ ರಾಜ್ಯದಾದ್ಯಂತ ಚುನಾವಣೆ ನಡೆಸಬೇಕಿದೆ. ಮೀಸಲಾತಿ ಕಲ್ಪಿಸುವುದು ದೊಡ್ಡ ಪ್ರಕ್ರಿಯೆಯಾಗಿದೆ. ಅದಕ್ಕಾಗಿ ಹೆಚ್ಚುವರಿ ಕಾಲಾವಕಾಶದ ಅಗತ್ಯವಿದೆ. ಹಿಂದುಳಿದ ವರ್ಗಗಳನ್ನು 1995ರಿಂದ ವಿಶ್ಲೇಷಿಸಬೇಕು. ಇದು ಅತ್ಯಂತ ಕ್ಲಿಷ್ಟಕರ ಕೆಲಸ. ಇದಕ್ಕಾಗಿಯೇ ಆಯೋಗ ರಚಿಸಲಾಗಿದ್ದು, ಅದು ದೊಡ್ಡ ಜವಾಬ್ದಾರಿ ನಿಭಾಯಿಸುತ್ತಿದೆ. 138 ತಾ.ಪಂ. ಹಾಗೂ 34 ಜಿ.ಪಂ. ಗಳಿಗೆ ಮೀಸಲಾತಿ ಕಲ್ಪಿಸುವುದು ಕಷ್ಟಕರವಾದ ಕೆಲಸ. ಆದ್ದರಿಂದ, ಹೆಚ್ಚಿನ ಕಾಲಾವಕಾಶ ಕೋರುತ್ತಿದ್ದೇವೆ ಎಂದರು.
ಚುನಾವಣಾ ಆಯೋಗದ ಆಕ್ಷೇಪ:ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ಮಧ್ಯಪ್ರದೇಶ ಪ್ರಕರಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸುವುದಕ್ಕೆ ಸಂಬಂಧಿಸಿದಂತೆ ಆಯೋಗ ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿರುವಾಗ ರಾಜ್ಯ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದು ಆಯೋಗದ ಅಧಿಕಾರ ಕಸಿದುಕೊಂಡಿದೆ. ಇದರಿಂದ ಚುನಾವಣೆ ವಿಳಂಬವಾಗಿದೆ. ಆದ್ದರಿಂದ, ಸರ್ಕಾರಕ್ಕೆ ಹೆಚ್ಚಿನ ಕಾಲಾವಕಾಶ ನೀಡಬಾರದು ಎಂದು ತಕರಾರು ಎಂದು ತಕರಾರು ಎತ್ತಿದರು.
ಅಂತಿಮವಾಗಿ ಸರ್ಕಾರದ ಕೋರಿಕೆಗೆ ಸಮ್ಮತಿಸಿದ ಆಯೋಗದ ಪರ ವಕೀಲರು, ಇಂದಿನಿಂದ 12 ವಾರಗಳಲ್ಲಿ ಎಲ್ಲ ಪ್ರಕ್ರಿಯೆ ಮುಗಿಯಬೇಕು. ಸರ್ಕಾರಕ್ಕೆ ಮತ್ತೆ ಕಾಲಾವಕಾಶ ವಿಸ್ತರಿಸಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಅದನ್ನು ಪರಿಗಣಿಸಿದ ಪೀಠ, ಸರ್ಕಾರಕ್ಕೆ 12 ವಾರಗಳ ಗಡುವು ನೀಡಿ, ವಿಚಾರಣೆಯನ್ನು ಮೂರು ತಿಂಗಳ ನಂತರಕ್ಕೆ ಮುಂದೂಡಿತು.
ಬಿಬಿಎಂಪಿ ಚುನಾವಣೆಗೆ ಸುಪ್ರೀಂ​ಕೋರ್ಟ್​ನಿಂದ ಡೆಡ್​ಲೈನ್​- ಕೊನೆಗೂ ಕೂಡಿ ಬಂತು ಮುಹೂರ್ತ

ಟಿಕೆಟ್​ ಘೋಷಣೆಯಾಗ್ತಿದ್ದಂತೆಯೇ ಹೇಮಲತಾ ನಾಯಕ್​ ಏರ್​ಲಿಫ್ಟ್​- ಓಡೋಡಿ ಬಂದ ಬಿಜೆಪಿ ಅಭ್ಯರ್ಥಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − ten =
Remember me
