ಬೆಂಗಳೂರು:ಅರಣ್ಯ ಇಲಾಖೆಯ ಗಣಿ ಗುತ್ತಿಗೆ ಸಮಸ್ಯೆಗಳನ್ನು ಬಗೆಹರಿಸಲು ಏಕಗವಾಕ್ಷಿ ಮಾದರಿ ವ್ಯವಸ್ಥೆ ರೂಪಿಸಿ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಅರಣ್ಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಅವರು, ರಾಜ್ಯದಲ್ಲಿ ಗಣಿ ಗುತ್ತಿಗೆ ಪಡೆದಿರುವ ಸಂಸ್ಥೆಗಳಿಗೆ ಅರಣ್ಯ ಇಲಾಖೆ ತೀರುವಳಿ ಮತ್ತಿತರ ಅನುಮತಿ ಪತ್ರಗಳನ್ನು ನೀಡಲು ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಗಣಿ ಮತ್ತು ಭೂ ವಿಜ್ಞಾನ, ಕಂದಾಯ ಹಾಗೂ ಅರಣ್ಯ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳು ಪ್ರತ್ಯೇಕ ಸಭೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.
ಅರಣ್ಯ ಇಲಾಖೆ ತೀರುವಳಿ ಪಡೆಯಲು ಬಹಳಷ್ಟು ಪ್ರಕರಣಗಳು ಬಾಕಿ ಇರುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದಕ್ಕೆ ಗಣಿ ಗುತ್ತಿಗೆ ಪಡೆದ ಸಂಸ್ಥೆಗಳು ಅರಣ್ಯೀಕರಣಕ್ಕೆ ಪರ್ಯಾಯ ಭೂಮಿ ನೀಡಿಲ್ಲ. ಆನೆಗಳು ಮತ್ತಿತರ ವನ್ಯಜೀವಿಗಳ ಉಪಟಳದಿಂದಾಗಿ ಕೃಷಿ ಭೂಮಿ ಮಾರಲು ಸಿದ್ಧರಿರುವ ರೈತರು ಹಾಸನ ಮತ್ತು ರಾಜ್ಯದ ಇತರ ಕೆಲವು ಭಾಗಗಳಲ್ಲಿದ್ದಾರೆ. ಇಂತಹ ರೈತರಿಗೆ ಈ ಸಂಸ್ಥೆಗಳು ಸೂಕ್ತ ಬೆಲೆ ನೀಡಿ ಜಮೀನು ಖರೀದಿಸಬಹುದು ಎಂದು ಅಧಿಕಾರಿಗಳಿಂದ ಅಭಿಪ್ರಾಯ ವ್ಯಕ್ತವಾಯಿತು.
ಭಾರತ ಸರ್ಕಾರ ಸ್ವಾಮ್ಯದ ಕೆಐಓಸಿಎಲ್ ಕುದುರೆಮುಖದ ಭೂಮಿಯನ್ನು ಅರಣ್ಯ ಇಲಾಖೆಗೆ ವಹಿಸಿಕೊಡುವ ಬಗ್ಗೆ ಚರ್ಚಿಸಿ ಬಗೆಹರಿಸಲು ಸೂಚಿಸಲಾಯಿತು.ಅನಗತ್ಯವಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಅರಣ್ಯ ಇಲಾಖೆ ತೊಂದರೆ ನೀಡಬಾರದು ಮತ್ತು ವಿನಾಕಾರಣ ವಿಳಂಬ ಮಾಡಬಾರದು ಎಂದು ತಾಕೀತು ಮಾಡಿದರು. ಅರಣ್ಯ ಇಲಾಖೆಯ 25 ಮಿಲಿಯನ್ ಟನ್ ಅದಿರನ್ನು ಹರಾಜು ಹಾಕುವ ಸಂಬಂಧ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯ ಪಡೆದು ಮುಂದುವರೆಯುವಂತೆ ತಿಳಿಸಿದರು.
2023- 24 ನೇ ಸಾಲಿಗೆ ಮುಖ್ಯ ಖನಿಜ ಹಾಗೂ ಉಪ ಖನಿಜಗಳಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ ಅಂತ್ಯದವರೆಗೆ 3,276 ಕೋಟಿ ರೂ.ಗಳ ರಾಜಧನ ಸಂಗ್ರಹಣೆಯಾಗಿದೆ ಎಂದು ಸಭೆಗೆ ಮಾಹಿತಿ ಒದಗಿಸಲಾಯಿತು.ಸರ್ಕಾರಕ್ಕೆ ಸಲ್ಲಿಕೆಯಾಗಬೇಕಾದ ರಾಜಧನ ಅನಗತ್ಯವಾಗಿ ಸೋರಿಕೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಜಾಗೃತ ದಳ ಕಾಲಕಾಲಕ್ಕೆ ಪರಿಶೀಲಿಸುವಂತೆ ಕ್ರಮವಹಿಸಲು ಹೇಳಿದರು.
ಸಿ ವರ್ಗದ ಅದಿರಿನ ಬ್ಲಾಕ್ ಗಳಿಗೆ ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಅರಣ್ಯ ಅನುಮತಿಗಳನ್ನು ವರ್ಗಾಯಿಸುವ ಬಗ್ಗೆ ಕಾನೂನು ಅಭಿಪ್ರಾಯ ಪಡೆಯುವಂತೆ ಸಲಹೆ ನೀಡಿದರು. ಈಗಾಗಲೇ ಗಣಿಗಾರಿಕೆ ನಡೆಸಿದ ಅರಣ್ಯ ಪ್ರದೇಶದಲ್ಲಿ ಮತ್ತು ಅರಣ್ಯೇತರ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವ ಕುರಿತು ಚರ್ಚಿಸಲಾಯಿತು.
ಅರಣ್ಯ ಸಚಿವ ಈಶ್ವರ ಖಂಡ್ರೆ, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ , ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕ ಗಿರೀಶ್ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
