ಬೆಂಗಳೂರು:ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸಲು ಪ್ರಾರಂಭಿಸಲಾಗಿರುವ ಗ್ರಾಮ ಒನ್ ಕೇಂದ್ರಗಳನ್ನು ಬಲಪಡಿಸಲು ಇನ್ನಷ್ಟು ಸೇವೆಗಳನ್ನು ಸೇರ್ಪಡೆಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಇ-ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಬಹುದಾದ ಸೇವೆಗಳನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಜಿಲ್ಲೆಗಳಿಗೆ ವಿಶಿಷ್ಟವಾದ ಸೇವೆಗಳನ್ನು ಆಯಾ ಜಿಲ್ಲೆಗಳಿಗೆ ಸೀಮಿತಗೊಳಿಸಿ ಗ್ರಾಮ ಒನ್ ಕೇಂದ್ರಗಳಲ್ಲಿ ಒದಗಿಸಬೇಕು. ಜೊತೆಗೆ ಮೈಕ್ರೋ ಬ್ಯಾಂಕಿಂಗ್, ಎಲ್​ಪಿಜಿ ಬುಕಿಂಗ್ ಮತ್ತಿತರ ಕೆಲವು ಸೇವೆಗಳನ್ನು ಒದಗಿಸಲು ಅವಕಾಶ ಕಲ್ಪಿಸಬಹುದು ಎಂದು ತಿಳಿಸಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈ ವರೆಗೆ ಒಟ್ಟು 7,274 ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, 2022ರ ಜನವರಿಯಲ್ಲಿ 65,520 ವಹಿವಾಟು ನಡೆದಿದ್ದು, ಜೂನ್ ತಿಂಗಳಲ್ಲಿ ಅದು 10,36,542ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಟಲ್ ಜನಸ್ನೇಹಿ ಕೇಂದ್ರಗಳ ಸೇವೆಯನ್ನು ಗ್ರಾಮ ಒನ್ ಮೂಲಕವೂ ಒದಗಿಸುವ ಬಗ್ಗೆ ಪ್ರಾಯೋಗಿಕವಾಗಿ ಕೆಲವು ಕೇಂದ್ರಗಳಲ್ಲಿ ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ರಾಜ್ಯದಲ್ಲಿ ಹೊಸ ಡಾಟಾ ಸೆಂಟರ್ ಪ್ರಾರಂಭಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಹೊಸ ಡಾಟಾ ಸೆಂಟರ್ ಸ್ಥಾಪನೆಗೆ ಸೂಕ್ತ ಸ್ಥಳ ನಿಗದಿಪಡಿಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು. ಜೊತೆಗೆ ಖಾಸಗಿ ಕಂಪನಿಗಳೂ ಡಾಟಾ ಸೆಂಟರ್ ಪ್ರಾರಂಭಿಸಲು ಮುಂದೆ ಬರುತ್ತಿದ್ದು, ಸರ್ಕಾರವೂ ಇವುಗಳ ಸೇವೆ ಪಡೆದುಕೊಳ್ಳುವ ಬಗ್ಗೆ ಸೂಕ್ತ ನೀತಿ ರೂಪಿಸುವಂತೆ ಸಿಎಂ ತಿಳಿಸಿದರು.
ಕೆ-ಜಿಐಎಸ್ ಅಡಿ ಲಭ್ಯವಿರುವ ಮಾಹಿತಿಗಳನ್ನು ತ್ವರಿತವಾಗಿ ಹಾಗೂ ನಿಖರವಾಗಿ ನಿರ್ಧಾರ ತೆಗೆದುಕೊಳ್ಳಲು ಆಧಾರವಾಗಿ ಬಳಸಿಕೊಳ್ಳಲು ಅವಕಾಶವಿದೆ. ವಿವಿಧ ಇಲಾಖೆಗಳು ಇವುಗಳ ಅನುಕೂಲ ಪಡೆಯಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು. ಪಿಎಂ ಗತಿಶಕ್ತಿ ಯೋಜನೆಯಡಿ ರಾಜ್ಯದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಡ್ರೋನ್ ಸ್ಕೂಲ್ ಪ್ರಾರಂಭಿಸಲು ಸಿದ್ಧತೆ ನಡೆಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಕುಟುಂಬ ತಂತ್ರಾಂಶದ ಮಾಹಿತಿಯನ್ನಾಧರಿಸಿ, ರಾಜ್ಯದಲ್ಲಿ ಹಲವು ಯೋಜನೆಗಳಡಿ ನಾಗರಿಕರು ಅರ್ಜಿ ಸಲ್ಲಿಸದೆಯೇ ವಿವಿಧ ಸವಲತ್ತುಗಳನ್ನು ನೀಡಲಾಗುತ್ತಿದೆ. ಇದೀಗ ಮುಖ್ಯಮಂತ್ರಿಯವರು ಇತ್ತೀಚೆಗೆ ಘೋಷಿಸಿರುವ 75 ಯುನಿಟ್ ಉಚಿತ ವಿದ್ಯುತ್ ನೀಡುವ ಅಮೃತ ಜ್ಯೋತಿ ಯೋಜನೆ, ನೇಕಾರರ ಮಕ್ಕಳ ವಿದ್ಯಾರ್ಥಿ ವೇತನ ಮತ್ತಿತರ ಕಾರ್ಯಕ್ರಮಗಳಿಗೆ ಈ ದತ್ತಾಂಶವನ್ನು ಆಧರಿಸಿ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಸಮಗ್ರ ಕುಂದು ಕೊರತೆ ನಿವಾರಣಾ ವ್ಯವಸ್ಥೆಯಡಿ ದೂರುದಾರರಿಗೆ ತೃಪ್ತಿಕರ ಸೇವೆ ಒದಗಿಸಲು ಒತ್ತು ನೀಡಬೇಕೆಂದು ಮುಖ್ಯಮಂತ್ರಿಗಳು ತಿಳಿಸಿದರು.
ಇ-ಆಡಳಿತ ಉತ್ತಮ ಆಡಳಿತದ ಪ್ರಮುಖ ಸಾಧನ. ಇದನ್ನು ಹೆಚ್ಚಾಗಿ ಬಳಸಿ ಸರ್ಕಾರದ ಸವಲತ್ತುಗಳನ್ನು ಜನರಿಗೆ ಪಾರದರ್ಶಕವಾಗಿ ತಲುಪಿಸಬೇಕು. ರಾಜ್ಯದಲ್ಲಿ ಡಿ.ಬಿ.ಟಿ. ವೇದಿಕೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಬಳಸಲಾಗುತ್ತಿದೆ. 2021-22 ರಲ್ಲಿ 1.76 ಕೋಟಿ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ 3.53 ಕೋಟಿ ವ್ಯವಹಾರ ನಡೆದಿದ್ದು, 11,708.75 ಕೋಟಿ ರೂ. ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗಿದೆ. 2022-23ನೇ ಸಾಲಿನಲ್ಲಿ ಈ ವರೆಗೆ 62.87 ಲಕ್ಷ ಫಲಾನುಭವಿಗಳಿಗೆ 3114.55 ಕೋಟಿ ರೂ. ವರ್ಗಾಯಿಸಲಾಗಿದೆ. ಡಿಬಿಟಿ ವೇದಿಕೆಯನ್ನು ಇನ್ನಷ್ಟು ಬಲಪಡಿಸಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಾಧ್ಯವಿರುವ ಎಲ್ಲ ಯೋಜನೆಗಳನ್ನು ಡಿಬಿಟಿ ವ್ಯಾಪ್ತಿಗೆ ತರುವಂತೆ ಸಿಎಂ ಸೂಚಿಸಿದರು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್ ಹಾಗೂ ಇ-ಆಡಳಿತ ಇಲಾಖೆ ಕಾರ್ಯದರ್ಶಿ ವಿ.ಪೊನ್ನುರಾಜ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿನಿಮಾ ‘ಡೊಳ್ಳು’, ಇದೀಗ ನಟ ಡಾಲಿ ಧನಂಜಯ ಮೂಲಕ ಮತ್ತೆ ಸದ್ದು!
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:20 + seven =
Remember me
