ಬೆಂಗಳೂರು:ಕಾವೇರಿ ಜಲ ನಿಯಂತ್ರಣ ಸಮಿತಿ ತಮಿಳುನಾಡಿಗೆ ಇನ್ನೂ 18 ದಿನಗಳ ಕಾಲ ನಿತ್ಯವೂ 3,000 ಕ್ಯೂಸೆಕ್ ಹರಿಸಲು ಕರ್ನಾಟಕಕ್ಕೆ  ಆದೇಶ ನೀಡಿರುವುದು ಆಘಾತಕಾರಿ. ಕಾವೇರಿ ಮತ್ತು ಕನ್ನಡಿಗರ ಪಾಲಿಗೆ ಮರಣಶಾಸನ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕಾವೇರಿ ಕೊಳ್ಳ ಮತ್ತು ಬೆಂಗಳೂರು ನಗರದ ಜನರ ಕತ್ತು ಹಿಚುಕುವುದಕ್ಕೆಂದೇ ಕಾಂಗ್ರೆಸ್ ಸರ್ಕಾರ ಬಂದಿದೆಯೇನೋ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆಆರ್‌ಎಸ್ ಜಲಾಶಯಕ್ಕೆ ನಿತ್ಯ 10,000 ಕ್ಯೂಸೆಕ್ ಒಳಹರಿವು ಇದೆ ಎನ್ನುತ್ತಾರೆ ಜಲ ಸಂಪನ್ಮೂಲ ಸಚಿವರು. ಇದಕ್ಕೆ ತದ್ವಿರುದ್ಧವಾಗಿ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ನಮ್ಮಲ್ಲಿ ನೀರೇ ಇಲ್ಲ ಎಂಬ ಮಾಹಿತಿ ನೀಡುತ್ತಾರೆ. ಇನ್ನೊಂದೆಡೆ ಹಿರಿಯ ಅಧಿಕಾರಿಯೊಬ್ಬರು ಈ ಆದೇಶದಿಂದ ರಾಜ್ಯಕ್ಕೆ 2.5 ಟಿಎಂಸಿ ನೀರು ಉಳಿತಾಯವಾಗಿದೆ ಎನ್ನುತ್ತಾರೆ. ‘ಎತ್ತು ಏರಿಗೆ, ಕೋಣ ನೀರಿಗೆ’ ಎನ್ನುವಂತಿದೆ ಜಲ ಸಂಪನ್ಮೂಲ ಇಲಾಖೆ ಮತ್ತು ಸರಕಾರದ ಪರಿಸ್ಥಿತಿ. ಹೆಜ್ಜೆಹೆಜ್ಜೆಗೂ ಅನರ್ಥಗಳನ್ನೇ ಮಾಡುತ್ತಿರುವ ಈ ಸಕಾಊರದ ವೈಫಲ್ಯದ ಲಾಭವನ್ನು ತಮಿಳುನಾಡು ಅತ್ಯಂತ ಜಾಣತನದಿಂದ ಪಡೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
ನಾವು ಕುಡಿಯಲು ನೀರು ಕೇಳುತ್ತಿದ್ದೇವೆ, ತಮಿಳುನಾಡು ಅಕ್ರಮವಾಗಿ ಮಿತಿಮೀರಿದ ವಿಸ್ತೀರ್ಣದಲ್ಲಿ ಬೆಳೆದ ಕುರುವೈ ಬೆಳೆಗೆ ನೀರು ಕೇಳುತ್ತಿದೆ. ಅಲ್ಲಿ ಸ್ವಾರ್ಥ ಇದೆ, ಇಲ್ಲಿ ಜನರ ಬದುಕಿದೆ. ಮಾನವೀಯ ನ್ಯಾಯಕ್ಕೆ ವಿರುದ್ಧವಾದ ತಮಿಳುನಾಡು ನಡೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಆ ರಾಜ್ಯದ ಇಂಥ ಮನಃಸ್ಥಿತಿಯ ವಿರುದ್ಧ ಪ್ರಬಲ ಹೋರಾಟ ಮಾಡುವ ಇಚ್ಛಾಶಕ್ತಿ ಈ ಸರ್ಕಾರಕ್ಕೆ ಇಲ್ಲದಾಗಿದೆ. ಕೇವಲ ಪಾಲುದಾರ ಪಕ್ಷ ಡಿಎಂಕೆಯ ಯೋಗಕ್ಷೇಮವನ್ನೇ ಕೈ ಸರ್ಕಾರ ನೋಡುತ್ತ, ಕರ್ನಾಟಕದ ಹಿತವನ್ನು ಸಂಪೂರ್ಣ ಬಲಿ ಕೊಟ್ಟಿದೆ. ಕನ್ನಡಿಗರ ಮೇಲೆ ’ಬಂಡೆ’ ಎಳೆದಿದೆ.
ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನರು. ಈಗಾಗಲೇ ಕಾವೇರಿ ನೀರು ಹಂಚಿಕೆಯನ್ನು ನ್ಯಾಯಾಧಿಕರಣ ಅಖೈರುಗೊಳಿಸಿದ್ದು, ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ, ಸಂಕಷ್ಟ ಕಾಲದಲ್ಲಿ ಪರಿಹಾರವೇನು? ಮಾತೆತ್ತಿದರೆ ನೀರು ಬಿಡಿ ಎಂದು ಆದೇಶಿಸುವ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ, ಕಾವೇರಿ ಜಲ ನಿಯಂತ್ರಣ ಸಮಿತಿ ಈ ಕೂಡಲೇ ‘ಸಂಕಷ್ಟ ಹಂಚಿಕೆ ಸೂತ್ರ’ವನ್ನು ರೂಪಿಸಲೇಬೇಕು. ಆ ನಿಟ್ಟಿನಲ್ಲಿ ಸರ್ಕಾರ ಒತ್ತಡ ಹೇರಿ, ಆ ಸೂತ್ರ ರೂಪಿಸದ ಹೊರತು ತಮಿಳುನಾಡಿಗೆ ನೀರು ಹರಿಸುವ ಪ್ರಶ್ನೆಯೇ ಇಲ್ಲವೆಂದು ಕಡ್ಡಿ ತುಂಡು ಮಾಡಿದಂತೆ ಸ್ಪಷ್ಟವಾಗಿ ಹೇಳಲೇಬೇಕು. ಯಾವುದೇ ಕಾರಣಕ್ಕೂ ಈಗ ನೀರು ಹರಿಸಬಾರದು ಎಂದು ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 7 =
Remember me
