
ಬೆಂಗಳೂರು:ಬಸವಾದಿ ಶರಣರು ಹನ್ನೆರಡನೇ ಶತಮಾನದಲ್ಲಿಯೇ ಕರ್ಮ ಸಿದ್ಧಾಂತ ತಿರಸ್ಕರಿಸಿದ್ದರು. ಶಿಕ್ಷಕ ಸಮೂಹ ಅಂತಹ ಸಿದ್ಧಂತ ನಂಬುವುದು ಅಪಾಯಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ವಿಜ್ಞಾನ ವಿಷಯ ಓದಿದ ವಿದ್ಯಾರ್ಥಿಗಳೇ ಮೌಢ್ಯಕ್ಕೆ ಜೋತು ಬೀಳುವುದೂ ವಿಪರ್ಯಾಸ. ಶಿಕ್ಷಣ ಪಡೆದವರೇ ಜಾತಿ ತಾರತಮ್ಯ ಮಾಡಿದರೆ, ಅವರು ಪಡೆದ ಶಿಕ್ಷಣಕ್ಕೆ ಅರ್ಥ ಇರುವುದಿಲ್ಲ ಎಂದ ಅವರು, ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಗುಣಗಾನ ಮಾಡಿದರು.2ನೇ ರಾಷ್ಟ್ರಾಧ್ಯಕ್ಷರಾಗಿದ್ದ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಲು ಸಾಧ್ಯವಾಗಿದೆ ಅಂದರೆ, ಇದೇ ಸಾಧ್ಯತೆ ಎಲ್ಲಾ ಶಿಕ್ಷಕರಿಗೂ ಇದ್ದೇ ಇರುತ್ತದೆ. ಹೀಗಾಗಿ ಪ್ರತಿಯೊಬ್ಬ ಶಿಕ್ಷಕರೂ ರಾಧಾಕೃಷ್ಣನ್ ಅವರ ಮಾರ್ಗದಲ್ಲಿ ನಡೆಯಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.ಪ್ರತಿಯೊಬ್ಬ ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವವರು ನಮ್ಮ ಶಿಕ್ಷಕರು. ಇದು ಶಿಕ್ಷಕರ ಮೂಲಭೂತ ಜವಾಬ್ದಾರಿಯಾಗಿದೆ. ಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಅತಿ ಹೆಚ್ಚಾಗಿದ್ದಾರೆ. ಹೀಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ ಎಂದರು.ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವಂತೆ ರೂಪಿಸುವುದೇ ಶಿಕ್ಷಕರ ಜವಾಬ್ದಾರಿ. ವೈಜ್ಞಾನಿಕತೆ ಮತ್ತು ವೈಚಾರಿಕತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡರೆ ಮಾತ್ರ ಅವರಿಗೆ ಸಮಾಜ ಅರ್ಥ ಆಗುತ್ತದೆ. ಸಮಾಜದ ಸಮಸ್ಯೆಗಳಿಗೆ ಪರಿಹಾರ ರೂಪಿಸುತ್ತಾರೆ ಎಂದರು.
ವೈಚಾರಿಕವಾಗಿ ರೂಪಿಸಲು ಕರೆವಿಜ್ಞಾನ ಓದಿರುವ ವಿದ್ಯಾರ್ಥಿಗಳೂ ಮೌಡ್ಯಕ್ಕೆ ಜೋತು ಬೀಳುವುದು, ಜಾತಿ ತಾರತಮ್ಯ ಮಾಡುವುದಾದರೆ ಅವರಿಗೆ ಸಿಕ್ಕ ಶಿಕ್ಷಣಕ್ಕೆ ಅರ್ಥ ಇರುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳನ್ನು ವೈಚಾರಿಕವಾಗಿ ರೂಪಿಸುವ ಜವಾಬ್ದಾರಿ ಶಿಕ್ಷಣದ್ದಾಗಿದೆ ಎಂದರು.ಎಲ್ಲರಿಗೂ ಶಿಕ್ಷಣ ದೊರಕದಂತೆ ತಡೆಯುತ್ತಿದ್ದ ಕಾಲ ಈಗ ಇಲ್ಲ. ಈಗ ಪ್ರತಿಯೊಬ್ಬರಿಗೂ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಕಡ್ಡಾಯ ಶಿಕ್ಷಣದ ಜೊತೆಗೆ ಅತ್ಯುತ್ತಮ ವ್ಯಕ್ತಿತ್ವಗಳನ್ನು ರೂಪಿಸುವ ರೂವಾರಿಗಳು ನಮ್ಮ ಶಿಕ್ಷಕರು ಎಂದು ಮೆಚ್ಚುಗೆ ಸೂಚಿಸಿದರು.
ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮಾನವೀಯ ಜವಾಬ್ದಾರಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಶಿಕ್ಷಕರಿಂದ, ಶಿಕ್ಷಣದಿಂದ ಮಾತ್ರ ಸಾಧ್ಯ. ಸಾವಿತ್ರಿ ಬಾಯಿ ಫುಲೆ, ರಾಧಾಕೃಷ್ಣನ್ ಅವರ ಆದರ್ಶಗಳು ಇಡೀ ಶಿಕ್ಷಕ ಸಮುದಾಯಕ್ಕೆ ಮಾದರಿಯಾಗಲಿ ಎಂದು ಹಾರೈಸಿದರು.
ಶಿಕ್ಷಕರ ಸಮಸ್ಯೆಗೆ ಸ್ಪಂಧನೆ:ಶಿಕ್ಷಕರ ಸಮಸ್ಯೆಗಳನ್ನು ಶಿಕ್ಷಕರ ಸಂಘದ ಜೊತೆ ಸೇರಿ ಸುದೀರ್ಘವಾಗಿ ಚರ್ಚಿಸಿದ್ದೇನೆ. ಪದವಿಪೂರ್ವ ಶಿಕ್ಷಕರ ಸಮಸ್ಯೆಗಳು ಅರ್ಥವಾಗಿದೆ. ಇವುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ:ಪ್ರಾಥಮಿಕ ಶಾಲೆಯ 20 ಶಿಕ್ಷಕರು, ಪ್ರೌಢಶಾಲೆಯ 11 ಶಿಕ್ಷಕರು, ಪಿಯು ಕಾಲೇಜಿನ ಎಂಟು ಉಪನ್ಯಾಸಕರು ಹಾಗೂ ಒಬ್ಬ ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ, ಗೌರವಿಸಲಾಯಿತು.
ಹಾಜರಿದ್ದವರು:ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ಬಿ.ಪಿ. ಹರೀಶ್, ಎನ್.ಎಚ್. ಕೋನರಡ್ಡಿ, ವಿಧಾನ ಪರಿಷತ್ ಸದಸ್ಯರಾದ ರಾಮೋಜಿ ಗೌಡ, ಸುಧಾಮ್‌ದಾಸ್, ಡಿ.ಟಿ. ಶ್ರೀನಿವಾಸ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಹಾಜರಿದ್ದರು. ಶಾಸಕರಾದ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದರು.
*ಎಲ್ಲರಿಗೂ ಶಿಕ್ಷಣ ದೊರಕದಂತೆ ತಡೆಯುತ್ತಿದ್ದ ಕಾಲ ಈಗಿಲ್ಲ. ಹಣೆಬರಹ, ಕರ್ಮ ಸಿದ್ಧಾಂತವನ್ನು ಶಿಕ್ಷಕರೇ ನಂಬಿದರೆ ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮನೋಭಾವದ ವಿದ್ಯಾರ್ಥಿಗಳನ್ನು ರೂಪಿಸಲು ಹೇಗೆ ಸಾಧ್ಯ?-ಸಿದ್ದರಾಮಯ್ಯ, ಮುಖ್ಯಮಂತ್ರಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 10 =
Remember me
